ರಾಜಕೀಯ

ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ

Manjula VN

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಬಿಜೆಪಿ ಸಮರ್ಥಿಸಿಕೊಂಡಿದೆ.

ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ.ಎಸ್‌.ಈಶ್ವರಪ್ಪ ಮತ್ತು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಅವರು ಹೇಳಿದ್ದಾರೆ.

ತ್ರಿವಳಿ ತಲಾಖ್ ಪದ್ಧತಿಯನ್ನು ಅಪರಾಧೀಕರಣಗೊಳಿಸುವ ಮೂಲಕ ಮುಸ್ಲಿಂ ಮಹಿಳೆಯರು ದೇಶದಲ್ಲಿ ನಿರ್ಭೀತಿಯಿಂದ ಬದುಕಲು ಪ್ರಧಾನಿ ಮೋದಿ ಸಹಾಯ ಮಾಡಿದ್ದಾರೆಂಬುದನ್ನು ವಿವರಿಸುವುದು ಭಟ್ ಅವರ ಉದ್ದೇಶವಾಗಿತ್ತು. ಈ ಹೇಳಿಕೆ ಯಾವ ರೀತಿಯಲ್ಲಿ ಪ್ರಚೋದನಕಾರಿಯಾಗಿದೆ? ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಅವರನ್ನು ಬಂಧನಕ್ಕೊಳಪಡಿಸಬಾರದು ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

ಹನುಮ ಜಯಂತ್ಯುತ್ಸವ ಅಂಗವಾಗಿ ಡಿಸೆಂಬರ್‌ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್‌ ಭಟ್‌ ಅವರು, ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹೇಳಿದ್ದರು.

ಈ ಹೇಳಿಕೆ ವಿರುದ್ದ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್‌ ಅವರು ಕಿಡಿಕಾರಿದ್ದರು. ಕಲ್ಲಡ್ಕ ಪ್ರಭಾಕರ್ ಅವರು, ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಹೇಳಿದ್ದರು. ಅಲ್ಲದೆ, ಶ್ರೀರಂಗಪಟ್ಟಣ ಟೌನ್‌ ಠಾಣೆಯ ಪೊಲೀಸರಿಗೆ ಪ್ರಭಾಕರ್‌ ಭಟ್‌ ವಿರುದ್ಧ ದೂರು ನೀಡಿದ್ದರು.

ದೂರು ಹಿನ್ನೆಲೆಯಲ್ಲಿ ಪೊಲೀಸರು ಪ್ರಭಾಕರ್ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), 509 (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), 153ಎ (ಧರ್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವುದು) ಮತ್ತು 298 (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಿದ್ದರು

SCROLL FOR NEXT