ರಾಜಕೀಯ

120-150 ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ: ಫೆಬ್ರವರಿ ಅಂತ್ಯಕ್ಕೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

Manjula VN

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್ 120-150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಜಿಲ್ಲಾ ಸಮಿತಿಗಳ ಶಿಫಾರಸ್ಸಿನ ಮೇರೆಗೆ ಮುಂಬರುವ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಕಾಂಗ್ರೆಸ್ ರಾಜ್ಯ ಚುನಾವಣಾ ಸಮಿತಿಯು ಗುರುವಾರ ಚರ್ಚೆ ನಡೆಸಿತು.

ಹೊರ ರಾಜ್ಯಗಳ ನಾಯಕರು ಸೇರಿದಂತೆ ರಾಷ್ಟ್ರೀಯ ಮಟ್ಟದ ಸ್ಕ್ರೀನಿಂಗ್ ಕಮಿಟಿಯು ಇನ್ನು 3-4 ದಿನಗಳಲ್ಲಿ ರಚನೆಯಾಗಲಿದ್ದು, ಈ ಸ್ಕ್ರೀನಿಂಗ್ ಕಮಿಟಿ ಪಟ್ಟಿಯನ್ನು ಅಂತಿಮಗೊಳಿಸಲಿದೆ. ನಂತರ ಪಟ್ಟಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕೇಂದ್ರ ಚುನಾವಣಾ ಸಮಿತಿಗೆ (ಸಿಇಸಿ) ರವಾನಿಸಲಾಗುತ್ತದೆ ಎಂದು ತಿಳಿದುಬಂದಿದೆ.

"ಅಭ್ಯರ್ಥಿಗಳ ಮೊದಲ ಪಟ್ಟಿಯ ಘೋಷಣೆಯು ಕೊನೆಯ ವಾರ ಅಥವಾ ಮಾರ್ಚ್ ಮೊದಲ ವಾರದಲ್ಲಿ ಆಗುವ ಸಾಧ್ಯತೆಗಳಿವೆ. 120-150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಔಪಚಾರಿಕವಾಗಿ ಸ್ಕ್ರೀನಿಂಗ್ ಸಮಿತಿಯ ಮುಂದೆ ಇರಿಸಲಾಗುವುದು ಎಂದುಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಸಭೆಯಲ್ಲಿ ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಸೇರಿದಂತೆ ಸುಮಾರು 40 ಮಂದಿ ಹಿರಿಯ ನಾಯಕರು ಪಾಲ್ಗೊಂಡಿದ್ದರು.

ಅಭ್ಯರ್ಥಿಗಳ ಅಂತಿಮ ಪಟ್ಟಿಗೆ ಅನುಸರಿಸಬೇಕಾದ ಮಾರ್ಗಸೂಚಿಗಳು, ಗೆಲುವಿನ ಸಾಮರ್ಥ್ಯ, ಸತತ ಎರಡು ಚುನಾವಣೆಯಲ್ಲಿ ಸೋತವರು, ಜಾತಿ ವಿಚಾರ ಮತ್ತು ಪಕ್ಷವು ನಡೆಸಿದ ಸಮೀಕ್ಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಬಹು ಆಕಾಂಕ್ಷಿಗಳಿರುವುದರಿಂದ ಬಂಡಾಯ ಶಮನಗೊಳಿಸುವ ಕಾರ್ಯತಂತ್ರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಸಭೆಗೂ ಮುನ್ನ ಮಾತನಾಡಿರುವ ಡಿಕೆ.ಶಿವಕುಮಾರ್ ಅವರು, ಟಿಕೆಟ್ ಕೈ ತಪ್ಪಿದವರು ಪಕ್ಷಕ್ಕಾಗಿ ತಮ್ಮ ಮಹತ್ವಾಕಾಂಕ್ಷೆಯನ್ನು ತ್ಯಾಗ ಮಾಡಬೇಕು, ಪಕ್ಷ ಅಧಿಕಾರಕ್ಕೆ ಬಂದ ನಂತರ ಅವರಿಗೆ ಹುದ್ದೆಗಳನ್ನು ನೀಡಲಾಗುವುದು ಎಂದು ಹೇಳಿದರು.

ಈ ವೇಳೆ ಮಾತನಾಡಿದ ಕೇಂದ್ರದ ಮಾಜಿ ಸಚಿವ ಕೆ ಹೆಚ್ ಮುನಿಯಪ್ಪ ಅವರು, ಸತತ ಚುನಾವಣೆಯಲ್ಲಿ ಸೋತವರಿಗೆ ಟಿಕೆಟ್ ನೀಡುವ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅವರ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ ಎಡ ಮತ್ತು ಎಸ್‌ಸಿ ಬಲ ಸಮುದಾಯಗಳಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡರು.

ಸಭೆಯಲ್ಲಿ ಪುಲಿಕೇಶಿನಗರದಂತಹ ಸೂಕ್ಷ್ಮ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಲಿಲ್ಲ. ಅಲ್ಪಸಂಖ್ಯಾತರು ಈಗಾಗಲೇ ಮುಖಂಡರಿಗೆ ಪ್ರಾತಿನಿಧ್ಯ ನೀಡಿರುವುದರಿಂದ ಈ ವಿಚಾರವನ್ನು ನಾಯಕರು ಹೈಕಮಾಂಡ್ ಗೆ ಬಿಟ್ಟಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಸಭೆ ಬಳಿಕ ಸುರ್ಜೇವಾಲಾ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮತ್ತೊಂದು ಸುತ್ತಿನ ಮಾತುಕತೆಗಾಗಿ ಖಾಸಗಿ ಹೋಟೆಲ್‌ಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ.

ಸಭೆ ಬಳಿಕ ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಅಲ್ಲುಂ ವೀರಭದ್ರಪ್ಪ ಅವರು ಶಿವಶಂಕರಪ್ಪ ಜೊತೆಗೆ ಸಮಾಲೋಚನೆ ನಡೆಸಿದರು. ಶೀಘ್ರದಲ್ಲೇ ಶಾಮನೂರು ಶಿವಶಂಕರಪ್ಪ ಅವರು ಸಮುದಾಯದವರ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

SCROLL FOR NEXT