ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕೇ ಹೊರತು ಕೇಸರಿ ಪಕ್ಷದ ಕಚೇರಿ ಮುಂದೆ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಬುಧವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆಯೇ? ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಭರವಸೆ ನೀಡಿದ್ದರು. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಅವರ ನಿವಾಸಗಳ ಎದುರು ಪ್ರತಿಭಟನೆ ನಡೆಸಬೇಕೆಂದು ಹೇಳಿದರು.
ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಸಹಿ ಇರುವ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿದ್ದರು. ಅಧಿಕಾರಕ್ಕೆ ಬಂದ ಬಳಿಕ ಈ ಗ್ಯಾರಂಟಿ ಭರವಸೆಗಳನ್ನು ಅನುಷ್ಠಾನಗೊಳಿಸಲು ಅವರಿಗೆ ಕಷ್ಟವಾಗುತ್ತಿದೆ ಎಂದು ವ್ಯಂಗ್ಯವಾಡಿದರು.
ರಾಜ್ಯ ಬಿಜೆಪಿ ಅಧ್ಯಕ್ಷರಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ‘ನಾನು ಯಾವುದೇ ಹುದ್ದೆಯನ್ನೂ ಕೇಳಿಲ್ಲ’ ಎಂದು ತಿಳಿಸಿದರು.