ಬೆಂಗಳೂರು: ತಮ್ಮ ವೈಫಲ್ಯಗಳ ಮುಚ್ಚಿಕೊಳ್ಳಲು ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿರುವ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಯೋಜನೆಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು, ಮಾಡಿಕೊಳ್ಳಲಿಲ್ಲ ಎಂದು ಹೇಳಿದರು.
ಮುಂಗಾರು ವಿಫಲವಾಗಿರುವ ಕಾರಣ ಕೇಂದ್ರ ಸರ್ಕಾರ ನೀತಿಯನ್ನು ಅನುಸರಿಸಲು ಮುಂದಾಗಿದೆ. ಈ ನೀತಿ ಕೇವಲ ಕರ್ನಾಟಕಕ್ಕೆ ಮಾತ್ರ ಅನ್ವಯವಾಗುತ್ತಿಲ್ಲ. ಬಿಜೆಪಿ ಆಡಳಿತದ ರಾಜ್ಯಗಳಿಗೂ ಅದು ಅನ್ವಯಿಸುತ್ತದೆ. ನಮ್ಮ ರೈತರಿಂದಲೇ ಖರೀದಿ ಮಾಡಿ, ಕೇಂದ್ರ ಸರ್ಕಾರದ ಮೇಲೆ ಏಕೆ ಗೂಬೆ ಕೂರಿಸುತ್ತಿದ್ದೀರಿ?... ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತರದಿದ್ದರೆ ಪ್ರತಿಭಟನೆ ನಡೆಸುತ್ತೇವೆಂದು ಎಚ್ಚರಿಸಿದರು.
ಇದನ್ನೂ ಓದಿ: ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ್ದಕ್ಕೆ ಆಕ್ರೋಶ: ಜೂ.20ರಂದು ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ನೀಡಲು ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ ತೀವ್ರ ರಾಜಕೀಯ ವಿವಾದದ ಸ್ವರೂಪ ಪಡೆದುಕೊಂಡಿದೆ.
ಬಿಜೆಪಿಗೆ ಮತ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಅಕ್ಕಿ ನೀಡದೆ ಬಡವರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಮೋದಿಯವರೇ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ. ಬಿಜೆಪಿಯ ಬಿ ಟೀಂ ಜೆಡಿಎಶ್ ಕೂಡ ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಅಲ್ಲದೆ, ಜೂನ್.20 ರಂದು ರಾಜ್ಯದಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.