ರಾಜಕೀಯ

ವಿಧಾನಸಭಾ ಚುನಾವಣೆ: ಜೆಡಿಎಸ್ ಪರ ಮಮತಾ ಬ್ಯಾನರ್ಜಿ ಪ್ರಚಾರ- ಹೆಚ್'ಡಿ ಕುಮಾರಸ್ವಾಮಿ

Manjula VN

ಕೋಲ್ಕತ್ತಾ/ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಜೆಡಿಎಸ್ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆಂದು ಜಾತ್ಯಾತೀತ ಜನತಾದಳ ಪಕ್ಷ(ಜೆಡಿಎಸ್)ದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದರು.

ನಿನ್ನೆಯಷ್ಟೇ ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿಯವರು, ಮಮತಾ ಅವರೊಂದಿಗೆ ಮಾತುಕತೆ ನಡೆಸಿದರು.

ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದರ ಕುರಿತು ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಕುಮಾರಸ್ವಾಮಿಯವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕೋಲ್ಕತಾದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದೆ. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ, ಪಂಚ ರತ್ನ ಯಾತ್ರೆಯ ಯಶಸ್ಸು ಮತ್ತು ರಾಷ್ಟ್ರೀಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದೆವು ಎಂದು ಹೇಳಿದ್ದಾರೆ.

ರಾಷ್ಟ್ರ ರಾಜಕಾರಣದಲ್ಲಿ ಜೆಡಿಎಸ್ ಜೊತೆಗೂಡಿ ಕೆಲಸ ಮಾಡುವ ಬಗ್ಗೆ ಮಮತಾ ಬ್ಯಾನರ್ಜಿಯವರು ಚರ್ಚೆ ನಡೆಸಿದರು. ಇದರ ಜೊತೆಗೆ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ರಾಜ್ಯಕ್ಕೆ ಭೇಟಿ ನೀಡಿ, ಜೆಡಿಎಸ್ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆಂದು ತಿಳಿಸಿದ್ದಾರೆ.

ಈ ನಡುವೆ ರಾಹುಲ್ ಗಾಂಧಿಯವರಿಗೆ 2 ವರ್ಷ ಶಿಕ್ಷೆ ವಿಧಿಸಿರುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿ, ಇದೇನು ಆಶ್ಚರ್ಯ ತಂದಿಲ್ಲ. ಕೇಂದ್ರ ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಎಂಬುದು ಪ್ರತಿಯೊಬ್ಬರಿಗೂ ಗೊತ್ತಿದೆ ಎಂದಿದ್ದಾರೆ.

SCROLL FOR NEXT