ರಾಜಕೀಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.: ಡಿಕೆ ಶಿವಕುಮಾರ್

Lingaraj Badiger

ಬೆಂಗಳೂರು: ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ರೂಪಾಯಿ ನೀಡುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಇಂದು ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಪಕ್ಷದ ಜನಪರ ಕೊಡುಗೆಗಳು ಪ್ರತಿಯೊಂದು ವರ್ಗವನ್ನು ತಲುಪಿವೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ. ನೀಡುತ್ತೇವೆ ಎಂದು ಭರವಸೆ ನೀಡಿದರು.

ದೇವರು ವರ ಕೊಡಲ್ಲ, ಶಾಪನೂ ಕೊಡಲ್ಲ, ಅವಕಾಶ ಕೊಡುತ್ತಾನೆ. ಮಲ್ಲಿಕಾರ್ಜುನ ಖರ್ಗೆ ಅವರು ಅವಕಾಶ ಸಿಕ್ಕಾಗಲೆಲ್ಲ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಬಿಜೆಪಿ ರಾಹುಲ್ ಗಾಂಧಿ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದರು.

ಬಡವರ ಉನ್ನತಿಗಾಗಿ ಕಾಂಗ್ರೆಸ್ ಪಕ್ಷ ಹಲವು ಯೋಜನೆಗಳನ್ನು ನೀಡಿದೆ. ಕಾಂಗ್ರೆಸ್ ಆಡಳಿತದಲ್ಲಿ ಕಲಬುರಗಿಯಲ್ಲಿ ಭವ್ಯ ಕಟ್ಟಡಗಳು ನಿರ್ಮಾಣವಾಗಿದ್ದು, ಇಂದು ಕಾರ್ಮಿಕರ ಮಕ್ಕಳು ಕೂಡ ಮೆಡಿಕಲ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಕೊಡುಗೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಾವು ಸಿದ್ಧರಿದ್ದೇವೆ ಎಂದರು.

SCROLL FOR NEXT