ರಾಜಕೀಯ

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂಬ ಸಸ್ಪೆನ್ಸ್‌ಗೆ ಇಂದು ಸಂಜೆ ತೆರೆ ಬೀಳಲಿದೆ: ಈಶ್ವರ್ ಖಂಡ್ರೆ

Ramyashree GN

ನವದೆಹಲಿ: ಇಂದು ಸಂಜೆಯ ವೇಳೆಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ ನಿರ್ಧಾರದ ಸಸ್ಪೆನ್ಸ್‌ಗೆ ತೆರೆ ಬೀಳಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬುಧವಾರ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿರುವ ಖಂಡ್ರೆ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

'ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಕರ್ನಾಟಕದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ಮಾತ್ರ ನಿರ್ಧರಿಸುತ್ತದೆ. ನಾವು 100 ಪರ್ಸೆಂಟ್ ಒಗ್ಗಟ್ಟಾಗಿದ್ದೇವೆ. ಇಂದು ಸಂಜೆಯೊಳಗೆ ನಿರ್ಧಾರ ಕೈಗೊಳ್ಳಬಹುದು' ಎಂದು ಖಂಡ್ರೆ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಈಮಧ್ಯೆ, ಇಂದು ಮುಂಜಾನೆ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿಯಲ್ಲಿ ಸೋನಿಯಾ ಗಾಂಧಿ ಅವರ ನಿವಾಸ 10 ಜನಪಥ್‌ನಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.

ಸಿದ್ದರಾಮಯ್ಯ ಅವರ ನಿರ್ಗಮನದ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಆಗಮಿಸಿದರು. ಇವರಿಬ್ಬರೂ ಮುಖ್ಯಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಎಲ್ಲ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ದಕ್ಷಿಣದ ರಾಜ್ಯದಲ್ಲಿ ಸರ್ಕಾರ ರಚನೆ ಕುರಿತು ಚರ್ಚಿಸಲು ರಾಹುಲ್ ಗಾಂಧಿ ಮಂಗಳವಾರ ಖರ್ಗೆ ಅವರನ್ನು ಭೇಟಿ ಮಾಡಿದ್ದರು.

SCROLL FOR NEXT