ರಾಜಕೀಯ

ಚುನಾವಣೆಯಲ್ಲಿ ಸೋಲು: ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನಿಂದ ವಿಮರ್ಶನಾತ್ಮಕ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

Sumana Upadhyaya

ಬೆಂಗಳೂರು: ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ತೀರಾ ಕಳಪೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ಮಾಡಬೇಕಿರುವ ಬದಲಾವಣೆಗಳು ಹಾಗೂ ತರಬೇಕಿರುವ ಸುಧಾರಣೆಗಳ ಬಗ್ಗೆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದೆವು. ‘ಪಂಚರತ್ನ ರಥಯಾತ್ರೆ’ಗೂ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಆದರೆ ಫಲಿತಾಂಶ ನಮಗೆ ಅತೀವ ನಿರಾಶೆ ಉಂಟು ಮಾಡಿದೆ ಎಂದು ಕುಮಾಸ್ವಾಮಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುವ ವೇಳೆ ಹೇಳಿದ್ದಾರೆ. 

ಈ ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಮಹತ್ವದ ಬದಲಾವಣೆ ಮಾಡಲಿದ್ದೇವೆ ಎಂದು ಹೇಳಿದರು. 

ನವೆಂಬರ್ ನಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ‘ನಾನು ರಾಜಕೀಯದಲ್ಲಿ ಬೆಳವಣಿಗೆಗಳು ಆಗುತ್ತವೆ ಎಂದಿದ್ದೆ ಅಷ್ಟೇ‌. ಸರ್ಕಾರ ಹೋಗುತ್ತೆ ಅಂತಾ ಹೇಳಿದ್ದೆನಾ‌? ಎಂದು ಮರುಪ್ರಶ್ನೆ ಮಾಡಿದರು.

ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ ಎಂ ಇಬ್ರಾಹಿಂ ಮತ್ತು ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ಮತ್ತು ಯುವ ಘಟಕದ ನೂತನ ಅಧ್ಯಕ್ಷರನ್ನಾಗಿ ಮುಂದೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಕುತೂಹಲವಾಗಿದೆ.

SCROLL FOR NEXT