ಯಡಿಯೂರಪ್ಪ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ- ಸಿಎಂ ಸಿದ್ದರಾಮಯ್ಯ
ಪ್ರತಿನಿತ್ಯ ಬೈದರೆ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ. ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಪ್ರತಿನಿತ್ಯ ಬೈದರೆ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ. ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂರಪ್ಪ, ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ: ಮೋದಿ ಬಗ್ಗೆ ಅನಗತ್ಯ ಟೀಕೆ ಮಾಡುವುದು ಸಿದ್ದರಾಮಯ್ಯ ಚಾಳಿ; ಕಾಂಗ್ರೆಸ್ ನವರು ನಾಯಿ-ನರಿಗಳಂತೆ ಕಚ್ಚಾಡುತ್ತಾರೆ: ಯಡಿಯೂರಪ್ಪ
ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪ ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿ ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ ಎಂದಿದ್ದಾರೆ.
ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ. ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಅವರ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ಅವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ವೈ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ ಎಂದು ಟೀಕಿಸಿದ್ದಾರೆ.
ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ರಾಜ್ಯ ಬಿಜೆಪಿ ಮತ್ತು ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ. ಯಡಿಯೂರಪ್ಪ ಅವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.