ಬೆಂಗಳೂರು: ಇಂದು ರಾಜ್ಯ ಬಿಜೆಪಿಯಲ್ಲಿ ಹಲವು ಸವಾಲುಗಳು, ಸಮಸ್ಯೆಗಳು ಇವೆ. ಸದ್ಯ ನಮಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತಿಹೆಚ್ಚಿನ ಸೀಟುಗಳನ್ನು ಗೆಲ್ಲುವುದು ಗುರಿಯಾಗಿದೆ. ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದು ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶನಿವಾರ ಹೇಳಿದ್ದಾರೆ.
ಇಂದು ಬೆಂಗಳೂರಿನ ಗಾಂಧಿನಗರದಲ್ಲಿ ಬೂತ್ ಮಟ್ಟದ ಅಧ್ಯಕ್ಷ ಶಶಿಧರ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದರು. ರಾಷ್ಟ್ರೀಯ ನಾಯಕರು ಕೂಡ ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಇಂದು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ.
ಬೂತ್ ಗೆದ್ದರೆ ರಾಷ್ಟ್ರ ಗೆಲ್ಲುತ್ತೇವೆ ಎಂದು ನಡ್ಡಾ ಅವರ ಕಲ್ಪನೆ ಇದೆ. ಹೀಗಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದರು.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ ಬೆಂಗಳೂರಿನ ಡಾಲರ್ಸ್ ಕಾಲನಿಯ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಮತ್ತು ಶಿವಮೊಗ್ಗದ ಅವರ ನಿವಾಸದಲ್ಲಿ ಹಬ್ಬದ ವಾತಾವರಣ ಕಂಡುಬರುತ್ತಿದೆ. ನಿರಾಣಿ, ಸಿದ್ದೇಶ್ವರ್ ಆಗಮಿಸಿ ಬಿ.ವೈ.ವಿಜಯೇಂದ್ರಗೆ ಅಭಿನಂದನೆ ಸಲ್ಲಿಸಿದ್ದಾರೆ.