ರಾಜಕೀಯ

ಅಮಿತ್​ ಶಾ ಆಹ್ವಾನಿಸಿ ಬೃಹತ್ ಸಮಾವೇಶ ನಡೆಸಲು ಚಿಂತನೆ ಮಾಡಿದ್ದೇವೆ: ಬಿಎಸ್. ಯಡಿಯೂರಪ್ಪ

Manjula VN

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಆಹ್ವಾನಿಸಿ ದೊಡ್ಡ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಯಡಿಯೂರಪ್ಪ ಅವರು, ಅಮಿತ್​ ಶಾ ಅವರನ್ನು ಆಹ್ವಾನಿಸಿ ದೊಡ್ಡ ಸಮಾವೇಶಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಈ ಸಮಾವೇಶದಲ್ಲಿ ಒಂದು ಲಕ್ಷ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡುವ ಅಪೇಕ್ಷೆ ಇದೆ. ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಆದೇಶದಂತೆ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಕಾಣುತ್ತಿದೆ. ಎಲ್ಲಾ ನಾಯಕರು ವಿಜಯೇಂದ್ರಗೆ ಆಶೀರ್ವಾದ ಮಾಡಿದ್ದಕ್ಕೆ ಸಂತೋಷವಾಗಿದೆ ಎಂದು ತಿಳಿಸಿದರು.

28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ: ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾತನಾಡಿ, ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ವಿಜಯೇಂದ್ರಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಗೆ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

SCROLL FOR NEXT