ವಿಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ 
ರಾಜಕೀಯ

ಒಕ್ಕಲಿಗ ಸಮುದಾಯದ ನಾಯಕನಿಗೆ ಬಿಜೆಪಿ ಮಣೆ: ವಿಪಕ್ಷ ನಾಯಕ ಆರ್ ಅಶೋಕ್ ಮುಂದಿರುವ ಸವಾಲುಗಳೇನು?

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.

ಅಶೋಕ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

ಅಶೋಕ ಅವರು ಪಕ್ಷದ ಪ್ರಮುಖ ಒಕ್ಕಲಿಗ ಮುಖವಾಗಿದ್ದು, ಇದು ಕರ್ನಾಟಕದ ಪ್ರಬಲ ಸಮುದಾಯಗಳಲ್ಲಿ ಒಂದಾಗಿದೆ. ವಿಶೇಷವಾಗಿ ಕರ್ನಾಟಕದ ದಕ್ಷಿಣ ಭಾಗಗಳಾದ ಬೆಂಗಳೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ತುಮಕೂರು ಮತ್ತು ಚಿಕ್ಕಮಗಳೂರುಗಳಲ್ಲಿ ಈ ಸಮುದಾಯದವರು ಹೆಚ್ಚಿಗಿದ್ದಾರೆ.

ವಿಧಾನಸಭೆಯ ವಿಪಕ್ಷ ನಾಯಕನಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ದುರಾಡಳಿತ ಮತ್ತು ಭ್ರಷ್ಟಾಚಾರವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೈತರಿಗೆ ಪರಿಹಾರ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಬಿಜೆಪಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾಗ ಬರ ಪರಿಹಾರ ಮೊತ್ತವನ್ನು ದ್ವಿಗುಣಗೊಳಿಸಿತ್ತು. ಆದರೆ ಪ್ರಸ್ತುತ ಸರ್ಕಾರ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಆರ್ ಅಶೋಕ ನಡೆದು ಬಂದ ದಾರಿ
ಏಳು ಬಾರಿ ಬಿಜೆಪಿ ಶಾಸಕರಾಗಿದ್ದ ಅಶೋಕ್ ಅವರು, 2012ರ ಜುಲೈನಿಂದ 2013ರ ಮೇರವರೆಗೆ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದರು. ಬಿಜೆಪಿಯ ಹಿರಿಯ ನಾಯಕರಿಗೆ ಸಂಪುಟ ಸದಸ್ಯರಾಗಿ ಐವರು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು. ಸಚಿವರಾಗಿ ಗೃಹ, ಕಂದಾಯ, ಪೌರಾಡಳಿತ, ಸಾರಿಗೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮುಂತಾದ ವಿವಿಧ ಖಾತೆಗಳನ್ನು ನಿರ್ವಹಿಸಿದ್ದ ಅನುಭವವಿದೆ.

ಆರ್ ಅಶೋಕ್ ಮುಂದಿರುವ ಸವಾಲುಗಳು?
ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲು ಕಂಡಿರುವುದರಿಂದ ಬೂತ್ ಮಟ್ಟದಿಂದ ಪಕ್ಷವನ್ನು ಕಟ್ಟಬೇಕಿದೆ. ಅಸಮಾಧಾನಗೊಂಡಿರುವ ಹಿರಿಯ ಶಾಸಕರ ಮನವೊಲಿಸಬೇಕಿದೆ. ಲೋಕಸಭೆ ಚುನಾವಣೆ ಬಿಜೆಪಿಗೆ ದೊಡ್ಡ ಸವಾಲಾಗಿದ್ದು ಕಳೆದ ಬಾರಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಅಷ್ಟೇ ಸ್ಥಾನಗಳನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.

ವಿರೋಧ ಪಕ್ಷದ ನಾಯಕರ ಆಯ್ಕೆಗೆ ಸಭೆ ನಡೆಯುತ್ತಿರುವಾಗ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀ ಕುಡಿಯುವುದಾಗಿ ಹೇಳಿ ಸಭೆಯಿಂದ ಹೊರನಡೆದಿದ್ದರು. ಇನ್ನು ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ಉಲ್ಲೇಖಿಸಿ ಬಿಜೆಪಿ ಒಂದೇ ಕುಟುಂಬದ ಪಕ್ಷವಾಗಬಾರದು ಎಂದು ಹೇಳಿದರು.

ಕಳೆದ ವಾರ ಬಿಜೆಪಿ ಹೈಕಮಾಂಡ್ ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ಶಿಕಾರಿಪುರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿತು. ವಿಜಯೇಂದ್ರ ಬಿಜೆಪಿಯಲ್ಲಿ ಪ್ರಮುಖ ನಾಯಕನಾಗಿರುವ ಬಿ ಎಸ್ ಯಡಿಯೂರಪ್ಪ ಅವರ ಮಗ, ಬಿಎಸ್ವೈ ಕರ್ನಾಟಕದ ಮತ್ತೊಂದು ಪ್ರಬಲ ಲಿಂಗಾಯತ ಸಮುದಾಯದವರಾಗಿದ್ದಾರೆ.

224 ಸದಸ್ಯ ಬಲದ ವಿಧಾನಸಭೆಗೆ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಸರ್ಕಾರ ನಡೆಸುತ್ತಿದೆ. ಕಾಂಗ್ರೆಸ್ 135, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಪಡೆದುಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT