ರಾಜಕೀಯ

ಬಿಜೆಪಿಯಲ್ಲಿ ಅಸಮಾಧಾನ: ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ ಎಂದ ಬಿವೈ ವಿಜಯೇಂದ್ರ

Ramyashree GN

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ತಮ್ಮನ್ನು ಪರಿಗಣಿಸಿರುವುದರ ವಿಚಾರವಾಗಿ ಪಕ್ಷದ ಒಂದು ವರ್ಗದ ನಾಯಕರಲ್ಲಿ ಅಸಮಾಧಾನ ಹೆಚ್ಚಾಗುತ್ತಿರುವ ನಡುವೆ, ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಯಾವುದೇ ಹೇಳಿಕೆ ನೀಡಲು ಸ್ವತಂತ್ರರು. ನಾನು ಅವರ ಅಭಿಪ್ರಾಯಗಳನ್ನು ಗೌರವಿಸುತ್ತೇನೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುತ್ತೇನೆ ಎಂದರು.

'ಯತ್ನಾಳ್ ಅವರು ನೋವಿನಿಂದ ಕೆಲವು ಹೇಳಿಕೆಗಳನ್ನು ನೀಡಿರಬಹುದು. ಅವರು ಕೆಲವು ವಿಷಯಗಳನ್ನು ಹಂಚಿಕೊಂಡಿರಬಹುದು. ಆದರೆ, ನಮ್ಮ ಕೇಂದ್ರ ನಾಯಕತ್ವ ಮತ್ತು ರಾಜ್ಯದ ವರಿಷ್ಠರು ಚರ್ಚಿಸಿ ಉತ್ತರ ಹುಡುಕಲು ಪ್ರಯತ್ನಿಸುತ್ತಾರೆ. ನಾವು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ' ಎಂಬ ಭರವಸೆ ವ್ಯಕ್ತಪಡಿಸಿದರು.

ಹಿರಿಯ ಶಾಸಕ ರಮೇಶ ಜಾರಕಿಹೊಳಿ ಅವರ ಅಸಮಾಧಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲವೂ ಚೆನ್ನಾಗಿದೆ, ಎಲ್ಲವೂ ಚೆನ್ನಾಗಿರುತ್ತದೆ, ಚಿಂತಿಸಬೇಕಾಗಿಲ್ಲ ಎಂದರು. 

ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಿಂದ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರು ಹಿರಿಯ ಶಾಸಕ ಆರ್. ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೊದಲೇ ಹೊರನಡೆದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಬಗ್ಗೆ ಮಾತನಾಡಿದ ವಿಜಯೇಂದ್ರ, ಸೋಲು ಗೆಲುವಿನ ಸೋಪಾನ. ವಿಧಾನಸಭೆ ಚುನಾವಣೆ ಸೋಲನ್ನು ಸವಾಲಾಗಿ ತೆಗೆದುಕೊಂಡು ಪಕ್ಷವನ್ನು ಬಲಪಡಿಸುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದರು.

SCROLL FOR NEXT