ರಾಜಕೀಯ

'ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುತ್ತಿದ್ದೇನೆ': ಮಾಜಿ ಶಾಸಕ ಬಿ ಎಂ ಸುಕುಮಾರ ಶೆಟ್ಟಿ 'ಕೈ' ಸೇರ್ಪಡೆ ಖಚಿತ

Sumana Upadhyaya

ಬೆಂಗಳೂರು: ಕಾಂಗ್ರೆಸ್ ನಿಂದ 2024ರ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ನಡೆಯಲಿದೆ, ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹದ ನಡುವೆ ಕರಾವಳಿಯ ಪ್ರಭಾವಿ ನಾಯಕ, ಬಿಜೆಪಿ ಮಾಜಿ ಶಾಸಕ ಬಿಎಂ ಸುಕುಮಾರ್ ಶೆಟ್ಟಿ (BM Sukumar Shetty) ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಪಕ್ಕಾ ಆಗಿದೆ. 

ಈ ಹಿಂದೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಿಂದ ಚುನಾವಣೆಗೆ ನಿಂತು ಶಾಸಕರಾಗಿದ್ದ ಬಿಎಂ ಸುಕುಮಾರ್ ಶೆಟ್ಟಿ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿತ್ತು. ಈ ಹಿನ್ನೆಲೆ ಇದೇ ಅಸಮಾಧಾನದಿಂದ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕಮಲ ತೊರೆದು ಕೈ ಹಿಡಿಯುವ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರೇ ದೃಢಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಕುಮಾರ್ ಶೆಟ್ಟಿ, ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಅಲೆ ಹೊರತುಪಡಿಸಿ ಬೇರೆಲ್ಲ ಕಡೆ ಬಿಜೆಪಿ ಹೆಸರು ಹಾಳುಮಾಡಿಕೊಂಡಿದೆ. ಡಿ ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ. ಈಗ ನಾನು ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬೆಳೆಯುವವರನ್ನು ಭಾರತೀಯ ಜನತಾ ಪಕ್ಷದಲ್ಲಿ ಬಿಡುವುದಿಲ್ಲ, ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಕಳೆದ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡದೆ ಅನ್ಯಾಯ ಮಾಡಿದ್ದಾರೆ. ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರು.

SCROLL FOR NEXT