ರಾಜಕೀಯ

ಅಧಿಕಾರದಲ್ಲಿ ಉಳಿಯುವ ನೈತಿಕ ಹಕ್ಕನ್ನು ಕಾಂಗ್ರೆಸ್ ಕಳೆದುಕೊಂಡಿದೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

Manjula VN

ಬೆಂಗಳೂರು: ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದು, ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

ನಿನ್ನೆಯಷ್ಟೇ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಎಸ್.ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು.

ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ರಾಜ್ಯದಾದ್ಯಂತ ಬಿಜೆಪಿ ನಾಯಕರು ಇದರ ವಿರುದ್ಧ ಹೋರಾಟ ನಡೆಸಲಿದ್ದಾರೆ. ಬಿಜೆಪಿಯ ಹೋರಾಟಕ್ಕೆ ರಾಜ್ಯದ ಜನತೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ರೈತರಿಗೆ ಸರ್ಕಾರ 3 ಗಂಟೆ ವಿದ್ಯುತ್ ನೀಡದ ಕಾರಣ ನೀರಾವರಿ ಪಂಪ್‌ಸೆಟ್‌ಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಎಲ್ಲಾ ನೀರಾವರಿ ಯೋಜನೆಗಳನ್ನು ನಿಲ್ಲಿಸಲಾಗಿದೆ. ರಾಜ್ಯದ ಸುಮಾರು 180 ತಾಲ್ಲೂಕುಗಳು ಬರ ಪರಿಸ್ಥಿತಿ ಎದುರಿಸುತ್ತಿವೆ. ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಮೇವಿನ ಕೊರತೆ ಇದೆ. ಆದರೂ ಸರ್ಕಾರ ಬರ ಘೋಷಣೆ ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಸರಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರನ್ನು ವಂಚಿಸಿದ್ದು, ಯೋಜನೆಗಳಾದರೂ ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ ಎಂದು ಕಿಡಿಕಾರಿದರು.

SCROLL FOR NEXT