ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ನಿಖಿಲ್ ಕುಮಾರಸ್ವಾಮಿ
ಬಿಜೆಪಿ ಜೊತೆ ಮೈತ್ರಿ ಘೋಷಿಸಿದ ಬೆನ್ನಲ್ಲೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ನವದೆಹಲಿ: ಬಿಜೆಪಿ ಜೊತೆ ಮೈತ್ರಿ ಘೋಷಿಸಿದ ಬೆನ್ನಲ್ಲೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿಯನ್ನು ಚುನಾವಣೆಗೆ ಕರೆತರುವ ಪ್ರಶ್ನೆಯೇ ಇಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಪುತ್ರ ನಿಖಿಲ್ ಈ ಹೇಳಿಕೆಯನ್ನು ನೀಡಿದ್ದಾರೆ.
ಇದನ್ನು ಓದಿ: ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್; ಸೀಟು ಹಂಚಿಕೆಯಲ್ಲಿ ಗೊಂದಲ ಇಲ್ಲ - ಎಚ್ ಡಿಕೆ
ಕುಮಾರಸ್ವಾಮಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ, ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಚರ್ಚಿಸಿದರು. ಈ ವೇಳೆ ನಿಖಿಲ್ ಕುಮಾರಸ್ವಾಮಿ ಸಹ ಇದ್ದರು.
ಅಮಿತ್ ಶಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್, ಸದ್ಯದ ಮಟ್ಟಿಗೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಜೆಡಿಎಸ್ ಇಂದು ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.