ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಂಎಲ್‌ಸಿ ಮತ್ತು ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಅವರು, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರ ಆಯ್ಕೆ ಮಾಡಲು ಸಲಹೆ ಪಡೆಯಲಾಗುತ್ತಿದೆ. ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಎಲ್ಲಾ ಭಾಗದ ನಾಯಕರುಗಳ ಜೊತೆ ಎಂಎಲ್‌ಸಿ ಚುನಾವಣೆ ಬಗ್ಗೆ ಚರ್ಚೆ ನಡಸಲಾಗುತ್ತಿದೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಮಾಜಿ ಶಾಸಕರು ಭೇಟಿಯಾಗಿದ್ದರು ಎನ್ನುವ ಪ್ರಶ್ನೆಗೆ ಉತ್ತರಿಸಿ,ಮೈತ್ರಿ ವಿಚಾರವಾಗಿ ಬಹಳಷ್ಟು ಜನರಿಗೆ ಸಿಟ್ಟಿದೆ. ಸಿಎಂ ಹಾಗೂ ನಾನು ನಾಳೆ ಈ ವಿಚಾರವಾಗಿ ಮಾತನಾಡುತ್ತೇವೆ ಎಂದು ತಿಳಿಸಿದರು.
ಹರಿಪ್ರಸಾದ್ ಹಾಗೂ ಮುನಿಯಪ್ಪ ಅವರ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿ, "ಬಿ.ಕೆ.ಹರಿಪ್ರಸಾದ್ ಮತ್ತು ಮುನಿಯಪ್ಪ ಅವರು ಲೋಕಸಭೆ ಚುನಾವಣೆಯ ವಿಚಾರವಾಗಿ ಚರ್ಚೆ ನಡೆಸಲು ಬಂದಿದ್ದರು. ಇದೇ ವೇಳೆ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಿ ಎಂದು ಮುನಿಯಪ್ಪ ಅವರು ಸಲಹೆ ನೀಡಿದರು ಎಂದು ಹೇಳಿದರು.