ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ 
ರಾಜಕೀಯ

ಲೋಕಸಭೆ ಚುನಾವಣೆ: ಶೋಭಾ ಕರಂದ್ಲಾಜೆ, ಸುನೀಲ್ ಬೋಸ್, ಕೆ ಜಯಪ್ರಕಾಶ್ ಹೆಗ್ಡೆ ಸೇರಿ ಹಲವರು ನಾಮಪತ್ರ ಸಲ್ಲಿಕೆ

Ramyashree GN

ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್ 26ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಅಭ್ಯರ್ಥಿಗಳು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಬೆಂಗಳೂರು ಉತ್ತರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವರಾದ ಬೈರತಿ ಬಸವರಾಜ್ ಮತ್ತು ಗೋಪಾಲಯ್ಯ ಅವರೊಂದಿಗೆ ರೋಡ್ ಶೋ ನಡೆಸಿದರು.

ಚಾಮರಾಜನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಎಚ್‌ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ನಾಮಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ ಮತ್ತು ಆಡಳಿತ ಪಕ್ಷದ ಕೆಲವು ಪ್ರಮುಖರೊಂದಿಗೆ ಬೋಸ್ ರೋಡ್ ಶೋ ನಡೆಸಿದರು.

ಚಾಮರಾಜನಗರದಲ್ಲಿ ಬೋಸ್ ಅವರ ಎದುರಾಳಿ ಎಸ್ ಬಾಲರಾಜ್ ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ (ಉಡುಪಿ-ಚಿಕ್ಕಮಗಳೂರು) ಕೂಡ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

ಈ ಹಿಂದೆ ನಾಮಪತ್ರ ಸಲ್ಲಿಸಿದ್ದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಮಾಜಿ ಸಚಿವ ವಿ ಸೋಮಣ್ಣ (ಇಬ್ಬರೂ ಬಿಜೆಪಿ) ಬುಧವಾರ ಮತ್ತೊಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ಒಡೆಯರ್ ಅವರೊಂದಿಗೆ ರೋಡ್ ಶೋ ನಡೆಸಿದರು. ಈ ವೇಳೆ ಮೈಸೂರಿನ ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕೂಡ ಉಪಸ್ಥಿತರಿದ್ದರು.

ಒಡೆಯರ್ ಅವರ ಪ್ರತಿಸ್ಪರ್ಧಿ ಎಂ ಲಕ್ಷ್ಮಣ್ ಕೂಡ ಇಂದು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಸೋಮಣ್ಣ ಅವರು ತುಮಕೂರಿನಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸೇರಿದಂತೆ ಇತರರೊಂದಿಗೆ ಮೆಗಾ ರೋಡ್ ಶೋ ನಡೆಸಿದ ನಂತರ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಿದರು.

ಮೊದಲ ಹಂತದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

SCROLL FOR NEXT