ಬ್ರಿಜೇಶ್ ಚೌಟಾ - ತೇಜಸ್ವಿ ಸೂರ್ಯ - ಕುಮಾರಸ್ವಾಮಿ
ಬ್ರಿಜೇಶ್ ಚೌಟಾ - ತೇಜಸ್ವಿ ಸೂರ್ಯ - ಕುಮಾರಸ್ವಾಮಿ 
ರಾಜಕೀಯ

ಕೊನೆ ದಿನ ನಾಮಪತ್ರ ಸಲ್ಲಿಕೆ ಭರಾಟೆ: ಕುಮಾರಸ್ವಾಮಿ, ತೇಜಸ್ವಿ ಸೂರ್ಯ, ಮುದ್ದಹನುಮೇಗೌಡ ಸೇರಿ ಹಲವರಿಂದ ಉಮೇದುವಾರಿಕೆ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 26 ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ, ಅವರ ಸೋದರ ಮಾವ ಹಾಗೂ ಖ್ಯಾತ ಹೃದ್ರೋಗ ತಜ್ಞ ಸಿ ಎನ್ ಮಂಜುನಾಥ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ಅವರಿಗೆ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಪಕ್ಕದ ಮೈಸೂರಿನ ಬಿಜೆಪಿ ಅಭ್ಯರ್ಥಿ ಹಾಗೂ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಥ್ ನೀಡಿದರು.

ಇನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಅಳಿಯ ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಪತ್ನಿ ಅನಸೂಯಾ, ಬಿಜೆಪಿ ಮುಖಂಡರು ಹಾಗೂ ಶಾಸಕರಾದ ಸಿ ಎನ್ ಅಶ್ವಥ್ ನಾರಾಯಣ್, ಮುನಿರತ್ನ, ಎಂ ಕೃಷ್ಣಪ್ಪ ಅವರೊಂದಿಗೆ ಇದ್ದರು.

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣದ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರು ಸಹ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌ನ ಇತರ ನಾಯಕರು ಪಾಲ್ಗೊಂಡಿದ್ದರು. ಜೆಡಿಎಸ್‌ನ ಯುವ ಘಟಕದ ಮುಖಂಡ ಹಾಗೂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಸೂರ್ಯ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ತುಮಕೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದ್ದು, ಗೃಹ ಸಚಿವ ಜಿ ಪರಮೇಶ್ವರ, ಸಹಕಾರ ಸಚಿವ ಕೆ ಎನ್ ರಾಜಣ್ಣ ಸೇರಿದಂತೆ ಹಲವರು ಅವರಿಗೆ ಸಾಥ್ ನೀಡಿದರು.

ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಮತ್ತು ಅವರ ಎದುರಾಳಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಗೋವಿಂದ್ ಕಾರಜೋಳ ಅವರು ಕೂಡ ಇಂದು ನಾಮಪತ್ರ ಸಲ್ಲಿಸಿದರು. ಚಂದ್ರಪ್ಪ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ನಡೆಸಿದರು.

ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಕೋಲಾರದಿಂದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಸೇರಿದಂತೆ ಹಲವರು ಇಂದು ನಾಮಪತ್ರ ಸಲ್ಲಿಸಿದರು.

ಹಾಸನದಲ್ಲಿ ಈ ಹಿಂದೆ ನಾಮಪತ್ರ ಸಲ್ಲಿಸಿದ್ದ ಹಾಲಿ ಸಂಸದ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದು, ಅಜ್ಜ ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಸೇರಿದಂತೆ ಇತರರಿದ್ದರು.

28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

SCROLL FOR NEXT