ಡಿ.ಕೆ ಸುರೇಶ್
ಡಿ.ಕೆ ಸುರೇಶ್ 
ರಾಜಕೀಯ

ಕೇಸರಿ ಶಾಲು ಹಾಕಿ ಬೆಟ್ಟ ಹತ್ತಿದರೆ ರಾಮನ ಭಕ್ತರಾಗಲ್ಲ; ಸೋಲಿನ ಭೀತಿಯಲ್ಲಿ ಬಿಜೆಪಿಯಿಂದ ಐಟಿ, ಇಡಿ ಅಸ್ತ್ರ ಪ್ರಯೋಗ: ಡಿ.ಕೆ. ಸುರೇಶ್

Shilpa D

ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಬಿಜೆಪಿಯು ಐಟಿ, ಇಡಿ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ಪ್ರಯೋಗಿಸುತ್ತಿದೆ. ಈ ಪ್ರಯೋಗಗಳು ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದು, ನಮಗೆ ಇದು ಹೊಸತಲ್ಲ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ತಿಳಿಸಿದರು.

ರಾಮನಗರದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ಭೈರೇಗೌಡರು, ಜೆಡಿಎಸ್ ಮುಖಂಡರಾದ ರಾಜಶೇಖರ್ ಅವರ ಪಕ್ಷ ಸೇರ್ಪಡೆ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಕಳೆದ ಮೂರ್ನಾಲ್ಕು ದಿನಗಳಿಂದ ನಿಮ್ಮ ಆಪ್ತರ ಮೇಲೆ ಐಟಿ ದಾಳಿ ನಡೆಯುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು 10 ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ ಎಂದರು.

ಅವರು ಏನಾದರೂ ಮಾಡಿ ನಮ್ಮ ನಾಯಕರನ್ನು ಕುಗ್ಗಿಸಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನಗಳು ಯಶಸ್ಸಾಗುವುದಿಲ್ಲ. ಐಟಿ, ಇಡಿ, ಸಿಬಿಐ ಅಧಿಕಾರಿಗಳು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಕಟ್ಟಿಹಾಕಿ ಸೋಲಿಸಲು ಬಂದಿದ್ದಾರೆ. ಇದು ನಮಗೆ ಹೊಸತಲ್ಲ. ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಇದೇ ತಂತ್ರ ಅನುಸರಿಸುತ್ತಿದೆ ಎಂದರು.

ಬಿಜೆಪಿ ನಾಯಕರು ರಾಮದೇವರ ಬೆಟ್ಟವನ್ನು ನಾವೇ ಅಭಿವೃದ್ಧಿ ಮಾಡುತ್ತೇವೆ ಎಂದು ಬಿಜೆಪಿಯ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ, ಅವರು ಯಾವಾಗ ಅಭಿವೃದ್ಧಿ ಮಾಡುತ್ತಾರೆ? ಅವರು ನಾಲ್ಕು ವರ್ಷಗಳ ಕಾಲ ಇದೇ ಜಿಲ್ಲೆಯಲ್ಲಿ ಅಧಿಕಾರದಲ್ಲಿದ್ದರಲ್ಲವೇ? ಜಿಲ್ಲೆಯಲ್ಲಿ ಕಸ ಗುಡಿಸಿ ಕ್ಲೀನ್ ಮಾಡುತ್ತೇನೆ ಎಂದಿದ್ದರು. ಅವರು ಕ್ಲೀನ್ ಮಾಡಿದರಾ? ರಾಮ ದೇವರ ಬೆಟ್ಟ ಅಭಿವೃದ್ಧಿಗೆ ಬಜೆಟ್ ನಲ್ಲಿ ಎಷ್ಟು ಅನುದಾನ ಇಟ್ಟಿದ್ದಾರೆ? ಎಷ್ಟು ಬಿಡುಗಡೆ ಮಾಡಿದ್ದಾರೆ? ರಣಹದ್ದು ಸಂರಕ್ಷಣಾ ಇಲಾಖೆ ಅನುಮತಿ ಪಡೆದಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಚುನಾವಣೆಗಾಗಿ ಇಂದು ಬೆಟ್ಟ ಹತ್ತಿದ್ದಾರೆ. ಇದು ಚುನಾವಣಾ ತಂತ್ರ. ರಾಮ ನಮ್ಮ ಊರಿನಲ್ಲೂ ಇದ್ದಾನೆ. ನಾನೂ ದೇವಾಲಯ ಕಟ್ಟಿದ್ದೇವೆ, ಪೂಜೆ ಮಾಡುತ್ತಿದ್ದೇವೆ. ನಮ್ಮವರೂ ರಸ್ತೆಯಲ್ಲಿ ಪಾನಕ, ಮಜ್ಜಿಗೆ ಹಂಚುತ್ತಿದ್ದಾರೆ. ಬಿಜೆಪಿ ಬಾವುಟ, ಕೇಸರಿ ಶಾಲು ಹಾಕಿಕೊಂಡು ರಾಮನ ಬೆಟ್ಟಕ್ಕೆ ಹತ್ತಿದರೆ ರಾಮನ ಭಕ್ತರಾಗುವುದಿಲ್ಲ. ಅವರು ಚುನಾವಣೆಗೆ ಮಾತ್ರ ರಾಮನ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ರಾಮದೇವರ ಬೆಟ್ಟದಲ್ಲಿ ದೇವಾಲಯ ಕಟ್ಟಿ ಎಂದು ನಾನು ಕೇಳುತ್ತಿಲ್ಲ. ಆ ಜಾಗ ಅಭಿವೃದ್ಧಿಗೆ ರಣಹದ್ದು ಸಂರಕ್ಷಣಾ ಇಲಾಖೆಯ ಅನುಮತಿ ಪಡೆಯಲು ಅರ್ಜಿ ಹಾಕಿದ್ದಾರಾ? ಹಾಕಿದ್ದರೆ ಆ ಅರ್ಜಿಯನ್ನು ತೋರಿಸಲಿ ಸಾಕು. ಡಿಪಿಆರ್ ಮಾಡುವ ಮುನ್ನ ಅನುಮತಿ ಬೇಕಲ್ಲವೇ? ಚುನಾವಣೆ ಸಮಯದಲ್ಲಿ ಅನುಮತಿ ಸಿಗುತ್ತದಾ? ರಾಮದೇವರ ಬೆಟ್ಟಕ್ಕೆ ಅವರಬ್ಬರೇ ಅಲ್ಲ, ರಾಮನ ನೋಡಲು, ಪೂಜಿಸಲು ಸಾವಿರಾರು ಮಂದಿ ಹೋಗುತ್ತಿದ್ದಾರೆ” ಎಂದರು.

SCROLL FOR NEXT