ರಾಜಕೀಯ ನಾಯಕರು
ರಾಜಕೀಯ ನಾಯಕರು PTI
ರಾಜಕೀಯ

ಲೋಕಸಭೆ ಚುನಾವಣೆ 2024: ರಾಜ್ಯದಲ್ಲಿ ಮೊದಲ ಹಂತದ ಬಹಿರಂಗ ಪ್ರಚಾರ ಅಂತ್ಯ, ಇನ್ನು ಮನೆ-ಮನೆ ಪ್ರಚಾರ!

Vishwanath S

ಬೆಂಗಳೂರು: ಕರ್ನಾಟಕದ 28 ಲೋಕಸಭೆ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಇಂದು ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.

ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಟ್ಟು 247 ಅಭ್ಯರ್ಥಿಗಳು ಸೆಣೆಸುತ್ತಿದ್ದಾರೆ. 226 ಪುರುಷರು ಮತ್ತು 21 ಮಹಿಳೆಯರು ಮೊದಲ ಸುತ್ತಿನ ಮತದಾನಕ್ಕಾಗಿ ಕಣದಲ್ಲಿದ್ದಾರೆ. ಅಲ್ಲಿ ಅಂದಾಜು 2.88 ಕೋಟಿ ಮತದಾರರು 30,602 ಮತಗಟ್ಟೆಗಳಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜನತಾ ದಳ (ಜಾತ್ಯತೀತ) ಮೈತ್ರಿಕೂಟದ ನಡುವೆ ನೇರ ಹಣಾಹಣಿ ನಡೆಯುತ್ತಿದೆ.

ಕಾಂಗ್ರೆಸ್ ಎಲ್ಲಾ 14 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಬಿಜೆಪಿ 11 ಮತ್ತು ಅದರ ಮೈತ್ರಿ ಪಾಲುದಾರ ಜೆಡಿಎಸ್ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ ಮತ್ತು ಕೋಲಾರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ಮೂರು ಕ್ಷೇತ್ರಗಳ ಜೊತೆಗೆ ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ ಮತ್ತು ಚಿಕ್ಕಬಳ್ಳಾಪುರಲ್ಲಿ ಚುನಾವಣೆ ನಡೆಯುತ್ತಿದೆ. ಈ 14 ಕ್ಷೇತ್ರಗಳಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಆಡಳಿತದಲ್ಲಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಕ್ಷೇತ್ರವನ್ನು ಗೆದ್ದುಕೊಂಡಿದ್ದರೆ ಬಿಜೆಪಿ 11ರಲ್ಲಿ ಗೆದ್ದಿದ್ದು ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಿತ್ತು.

ಕಳೆದ ವರ್ಷ ಮೇನಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ಇದೀಗ ಪ್ರಬಲ ಪ್ರದರ್ಶನ ನೀಡಲು ನಿರ್ಧರಿಸಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಅತ್ಯಂತ ಪ್ರಮುಖ ರಾಜ್ಯವಾಗಿದೆ ಏಕೆಂದರೆ ಅದು ಹಿಂದೆ ಅಧಿಕಾರ ಹಿಡಿದಿದ್ದು ಇಲ್ಲಿ ಮಾತ್ರ. ಕಳೆದ ಕೆಲವು ದಿನಗಳಲ್ಲಿ ನಡೆದ ತೀವ್ರ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಪ್ರಮುಖ ಮುಖವಾಗಿ ರ್ಯಾಲಿಗಳು ಮತ್ತು ರೋಡ್‌ಶೋಗಳನ್ನು ನಡೆಸುತ್ತಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೆಲವು ಕೇಂದ್ರ ಸಚಿವರು ಮತ್ತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಸಾಥ್ ನೀಡಿದ್ದರು. ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ವ್ಯಾಪಕ ಪ್ರಚಾರ ನಡೆಸಿದರು. ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸೇರಿದಂತೆ ಪ್ರಮುಖರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದಾರೆ. ಇನ್ನು ಜೆಡಿಎಸ್‌ ಪರ 90 ವರ್ಷ ವಯಸ್ಸಿನ ಪಕ್ಷದ ಹಿರಿಯ ಮುತ್ಸದಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮುಂಚೂಣಿಯಲ್ಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ 29 ಅಭ್ಯರ್ಥಿಗಳಿದ್ದರೆ, ಬೆಂಗಳೂರು ಸೆಂಟ್ರಲ್‌ನಲ್ಲಿ 24 ಮತ್ತು ದಕ್ಷಿಣ ಕನ್ನಡದಲ್ಲಿ ಕನಿಷ್ಠ ಒಂಬತ್ತು ಅಭ್ಯರ್ಥಿಗಳಿದ್ದಾರೆ. ಮಂಡ್ಯದಿಂದ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸೋದರ ಮಾವ ಖ್ಯಾತ ಹೃದ್ರೋಗ ತಜ್ಞ ಸಿ ಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರದಿಂದ, ಮೈಸೂರಿನಿಂದ ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಸಹೋದರ ಹಾಗೂ ಸಂಸದ ಡಿ ಕೆ ಸುರೇಶ್ ಬೆಂಗಳೂರು ಗ್ರಾಮಾಂತರದಿಂದ ಮೊದಲ ಹಂತದಲ್ಲಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಇಂದು ಪ್ರಚಾರದ ಕೊನೆಯ ದಿನವಾಗಿದ್ದರಿಂದ ಮತದಾರರ ಓಲೈಕೆಗೆ ಪ್ರಮುಖ ನಾಯಕರು ತೀವ್ರ ಪ್ರಯತ್ನ ನಡೆಸಿದ್ದಾರೆ. ಯಡಿಯೂರಪ್ಪ ತುಮಕೂರಿನ ಪಕ್ಷದ ಅಭ್ಯರ್ಥಿ ವಿ ಸೋಮಣ್ಣ ಪರ ಪ್ರಚಾರ ನಡೆಸಿದರೆ, ಮಂಡ್ಯದಲ್ಲಿ ಕುಮಾರಸ್ವಾಮಿ ರೋಡ್ ಶೋ ನಡೆಸಿದರು. ಬೆಂಗಳೂರಿನಲ್ಲಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಿದ್ದು, ಕನಕಪುರದಲ್ಲಿ ಶಿವಕುಮಾರ್ ಸಹೋದರ ಸುರೇಶ್ ಪರ ಪ್ರಚಾರ ನಡೆಸಿದರು. ನಾವು ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಭರವಸೆ ವ್ಯಕ್ತಪಡಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 14 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಎಲ್ಲವನ್ನೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ ಎಂದು ತುಮಕೂರಿನಲ್ಲಿ ಹೇಳಿದರು.

ಇನ್ನು ಡಿಕೆ ಶಿವಕುಮಾರ್ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಕನಕಪುರದಲ್ಲಿ ಕಾಂಗ್ರೆಸ್ ಸರ್ಕಾರದ ಖಾತ್ರಿ ಯೋಜನೆಗಳನ್ನು ಎತ್ತಿ ಹಿಡಿದು ಸಹೋದರ ಡಿಕೆ ಸುರೇಶ್ ಗೆ ಬೆಂಬಲ ನೀಡುವಂತೆ ಕೋರಿದರು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ತರಬೇಕು... ಖಾತರಿ ಯೋಜನೆಗಳ ಲಾಭ ಪಡೆಯಲು ಸಹಕರಿಸಬೇಕು ಎಂದರು. ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 'ಮೋದಿ ಕಾ ಗ್ಯಾರಂಟಿ' ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ನಡುವೆ ಹೋರಾಟ ಕಂಡುಬಂದಿದೆ.

ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ, ವಿಧಾನಸೌಧದ ಕಾರಿಡಾರ್‌ನಲ್ಲಿ ಪಾಕಿಸ್ತಾನದ ಪರ ಘೋಷಣೆಗಳು, ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ಸರ್ಕಾರದ ಮೇಲೆ ದಾಳಿ ಮಾಡಲು ರಾಜ್ಯವು ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಿತ್ತು. ಏಕೆಂದರೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರ ಎಂಬ ಆರೋಪ ಮಾಡುತ್ತಿತ್ತು.

ಕಾಂಗ್ರೆಸ್ ತನ್ನ "ಗ್ಯಾರಂಟಿ ಯೋಜನೆಗಳ" ಜನಪ್ರಿಯತೆಯ ಮೇಲೆ ಲಾಭ ಪಡೆಯಲು ಪ್ರಯತ್ನಿಸಿದೆ. ಅಲ್ಲದೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ "ಮಲತಾಯಿ" ಧೋರಣೆ ಮಾಡುತ್ತಿದೆ ಎಂಬುದನ್ನು ಪ್ರಮುಖ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿದೆ.

SCROLL FOR NEXT