ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ರಾಜಕೀಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಡಿಕೆ ಶಿವಕುಮಾರ್‌ಗೆ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್!

Nagaraja AB

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯ ಹೈಕೋರ್ಟ್ ಗುರುವಾರ ಮಧ್ಯಂತರ ರಿಲೀಫ್ ನೀಡಿದೆ.

ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವ ಎಫ್ ಐಆರ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, ಮುಂದಿನ ವಿಚಾರಣೆಯವರೆಗೂ ಅವರ ವಿರುದ್ಧ ಕ್ರಮ ಕೈಗೊಳ್ಳದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷರು ಆಗಿರುವ ಶಿವಕುಮಾರ್ ಮತದಾರರನ್ನು ಬ್ಲಾಕ್ ಮೇಲ್ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ಚುನಾವಣಾ ಆಯೋಗಕ್ಕೆ ಬಿಜೆಪಿ ನೀಡಿದ ದೂರಿನ ಮೇರೆಗೆ ಏಪ್ರಿಲ್ 19 ರಂದು ಪ್ರಕರಣ ದಾಖಲಾಗಿತ್ತು.

ರಾಜರಾಜೇಶ್ವರಿ ನಗರದಲ್ಲಿ ಚುನಾವಣಾ ಭಾಷಣದ ವೇಳೆ ತಮ್ಮ ಸಹೋದರ ಹಾಗೂ ಲೋಕಸಭಾ ಚುನಾವಣೆಯ ಅಭ್ಯರ್ಥಿ ಡಿ ಕೆ ಸುರೇಶ್‌ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಶಿವಕುಮಾರ್‌ , ಪಕ್ಷದ ಅಭ್ಯರ್ಥಿಗೆ ಮತ ನೀಡಿದರೆ ಮತದಾರರಿಗೆ ಕಾವೇರಿ ನೀರು ಪೂರೈಕೆ ಹಾಗೂ ಆಕ್ಯುಪೆನ್ಸಿ ಸರ್ಟಿಫಿಕೇಟ್‌ (ಸ್ವಾಧೀನಪಡಿಸಿಕೊಳ್ಳಲು ಪತ್ರ) ನೀಡುವುದಾಗಿ ಭರವಸೆ ನೀಡಿದ್ದರು ಎಂದು ಬಿಜೆಪಿ ಹೇಳಿಕೊಂಡಿದೆ.

ಶಿವಕುಮಾರ್ ಅವರ ಹೇಳಿಕೆಗಳು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 171B (ಲಂಚ) ಮತ್ತು 171C (ಚುನಾವಣೆಯಲ್ಲಿ ಅನಗತ್ಯ ಪ್ರಭಾವ) ಅಡಿಯಲ್ಲಿ ಅಪರಾಧಗಳನ್ನು ರೂಪಿಸುತ್ತವೆಯೇ ಎಂದು ಪ್ರಶ್ನಿಸಿದ ನ್ಯಾಯಾಧೀಶರು,

ಈ ವಿಷಯದ ಬಗ್ಗೆ ಆಳವಾದ ಪರಿಗಣನೆಯ ಅಗತ್ಯವನ್ನು ಒತ್ತಿ ಹೇಳಿದರು. ಆದರೆ, ತಮ್ಮ ಕಕ್ಷಿದಾರರು ಭಾಷಣ ಮಾಡುವಾಗ ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡುವಂತೆ ಶಿವಕುಮಾರ್ ಪರ ವಕೀಲರಿಗೆ ಸೂಚಿಸಿದರು.

ಅಲ್ಲದೇ, ಶಿವಕುಮಾರ್ ಅವರಿಗೆ ನೀಡಲಾದ ನೋಟಿಸ್‌ಗೆ ಪ್ರತಿಕ್ರಿಯಿಸಲು ಇಸಿ ನೀಡಿದ ಸಮಯದ ಬಗ್ಗೆ ಅದು ಕಳವಳ ವ್ಯಕ್ತಪಡಿಸಿತು. ಕೊನೆಗೆ ಮಧ್ಯಂತರ ಪರಿಹಾರವನ್ನು ನೀಡಿದ ನ್ಯಾಯಾಲಯ ಚುನಾವಣಾ ಭಾಷಣಗಳ ಗುಣಮಟ್ಟ ಕುಸಿಯುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು. ಶಿವಕುಮಾರ್ ಪರ ವಕೀಲರು ನೀಡಿದ ಭರವಸೆಯನ್ನು ದಾಖಲಿಸಿಕೊಂಡಿದ್ದು, ಅವರ ಹೇಳಿಕೆಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚಿಸಿತು.

SCROLL FOR NEXT