ಬೆಂಗಳೂರು: ಮುಡಾ ಸೈಟ್ ಹಗರಣ ಮತ್ತು ವಾಲ್ಮೀಕಿ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿವೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಭಾಗವಹಿಸಿದ್ದು, ಪಾದಯಾತ್ರೆ ಮುಗಿಯುವುದರೊಳಗೆ ನೂರಕ್ಕೆ ನೂರರಷ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂದು ಹೇಳಿದ್ದಾರೆ. ಈ ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ. ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ ಮೈಸೂರು ತಲುಪುವ ಮುನ್ನವೇ ಸಿದ್ದರಾಮಯ್ಯ ರಾಜಿನಾಮೆ ನೀಡುವುದ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ-ಜೆಡಿಎಸ್ ಸರ್ಕಾರ ರಚನೆಯಾಗುವವರೆಗೂ (ಕಾಂಗ್ರೆಸ್ ಸರ್ಕಾರದ ವಿರುದ್ಧ) ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.
‘ಭ್ರಷ್ಟ’ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿ ಪಾದಯಾತ್ರೆಗೆ ಇದೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರವಾಲ್ ಅವರು ಎಸ್‌ಟಿ ಕಾರ್ಪೊರೇಶನ್‌ನಲ್ಲಿನ ಹಗರಣವನ್ನು ಪ್ರಸ್ತಾಪಿಸಿದರು ಮತ್ತು ಇದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸೂಚನೆಯ ಮೇರೆಗೆ ನಡೆದಿದೆ ಎಂದು ಆರೋಪಿಸಿದರು. ಹಗರಣದ ಹಣವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಆ ಹಣವನ್ನು ಅವರು ಚುನಾವಣೆಗೆ ಬಳಸಿದ್ದಾರೆ,” ಎಂದು ಅಗರವಾಲ್ ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಮಾತನಾಡಿ, ‘ಕೃಷ್ಣ ಮತ್ತು ಅರ್ಜುನ’ ರೀತಿಯಲ್ಲಿ ವಿಜಯೇಂದ್ರ-ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆ ಜನಪರ ಯಾತ್ರೆಯಾಗಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟ ನಾಯಕರು ಮತ್ತು ಸುಳ್ಳುಗಾರರ ನೇತೃತ್ವದಲ್ಲಿದೆ ಎಂದು ಆರೋಪಿಸಿದ ಅವರು, ಇದು ಸಿದ್ದರಾಮಯ್ಯನವರು ಮನೆಗೆ ಹೋಗುವ ಸಮಯವಾಗಿದೆ ಎಂದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ಬಂದ ನಂತರ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ಬೆದರಿಕೆ ಹಾಕುತ್ತಿದೆ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಕೆಂಗೇರಿಯ ಕೆಂಪಮ್ಮ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪಾದಯಾತ್ರೆ ಆರಂಭವಾಯಿತು. ಬಿಜೆಪಿ-ಜೆಡಿಎಸ್ ಮೈತ್ರಿಯು ಸಂವಿಧಾನಕ್ಕೆ ಬದ್ಧವಾಗಿದೆ ಎಂಬ ಸಂದೇಶವನ್ನು ರವಾನಿಸಲು ವೇದಿಕೆಯ ಮೇಲೆ ಡಾ ಬಿಆರ್ ಅಂಬೇಡ್ಕರ್ ಭಾವಚಿತ್ರ ಇರಿಸಲಾಯಿತು. ಪಾದಯಾತ್ರೆಯಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕರಾದ ಜಿ.ಟಿ.ದೇವೇಗೌಡ, ಸಿ.ಬಿ.ಸುರೇಶ್ ಬಾಬು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.