ಬೆಂಗಳೂರು : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಪ್ರಕರಣಕ್ಕೆ ಸಂಬಂಧಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ದುರ್ಘಟನೆ ಸಂಬಂಧ ಸೂಕ್ತ ನ್ಯಾಯಾಂಗ ತನಿಖೆ ನಡೆಸುವಂತೆ ಹಾಗೂ ಮೃತ ಗರ್ಭಿಣಿಯರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ಮಹಿಳೆಯರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬ್ಲ್ಯಾಕ್ ಲಿಸ್ಟ್ ಆದ ಕಂಪೆನಿಯಿಂದ ಐವಿ ಗ್ಲುಕೋಸ್ ಖರೀದಿಸಲಾಗಿದೆ. ಬಳ್ಳಾರಿ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ದುರ್ಘಟನೆಯಲ್ಲಿ 7 ಜನ ಬಾಣಂತಿಯರು ಮತ್ತು ಮಗು ಸಾವನ್ನಪ್ಪಿದೆ. ಇಷ್ಟೆಲ್ಲಾ ಆದರೂ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಇಲ್ಲಿಗೆ ಭೇಟಿ ಕೊಟ್ಟಿಲ್ಲ.
ರಾಜ್ಯ ಸರಕಾರ ತನ್ನ ಜವಾಬ್ದಾರಿ ಮರೆತಿದೆ. ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ಮಾಡಲು ಮುಖ್ಯಮಂತ್ರಿ ಹೊರಟರೆ, ಜನಕಲ್ಯಾಣ ಸಮಾವೇಶವೆಂದು ಹೆಸರು ಬದಲಿಸಿ ಕಾರ್ಯಕ್ರಮ ಮಾಡಿದ್ದಾರೆ. ಜನಕಲ್ಯಾಣ ಸಮಾವೇಶ ಇರಲಿ, ರಾಜ್ಯದ ಪರಿಸ್ಥಿತಿ ಏನೆಂದು ಮುಖ್ಯಮಂತ್ರಿ ಗಮನಿಸಬೇಕೆಂದು ಒತ್ತಾಯಿಸಿದರು.
ಈ ನಡುವೆ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್‌ಸಿ ಎನ್.ರವಿಕುಮಾರ್ ಹಾಗೂ ಇತರ ಮುಖಂಡರನ್ನೊಳಗೊಂಡ ಬಿಜೆಪಿ ನಿಯೋಗ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿತು.
ಕಳಪೆ ಔಷಧಗಳನ್ನು ಖರೀದಿಸಿದವರು ಮತ್ತು ಆಸ್ಪತ್ರೆಯಲ್ಲಿನ ಸಾವುಗಳನ್ನು ಮುಚ್ಚಿಹಾಕಲು ಯತ್ನಿಸಿದವರನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಈ ಬೆಳವಣಿಗೆಗಳ ಹಿಂದೆ ಆಸ್ಪತ್ರೆ ಆಡಳಿತ, ಸರಕಾರಿ ಅಧಿಕಾರಿಗಳು, ರಾಜಕಾರಣಿಗಳ ಕೈವಾಡವಿದೆ ಎಂದು ನಾರಾಯಣಸ್ವಾಮಿ ಹೇಳಿದರು.
ಆರೋಗ್ಯ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ, ಸಾವಿಗೆ ಕಾರಣರಾದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.