ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲದಂತಾಗಿದೆ, ಇದೇನಾ ಮಹಿಳೆಯರ ಸಬಲೀಕರಣ?: ಸರ್ಕಾರಕ್ಕೆ HDK ಪ್ರಶ್ನೆ

ಬಳ್ಳಾರಿ ಬಾಣಂತಿಯರ ಸಾವು ಹಾಗೂ ಕರ್ನಾಟಕದಲ್ಲಿ ಈ ವರ್ಷ ಒಟ್ಟಾರೆಯಾಗಿ ಸಂಭವಿಸಿರುವ ಬಾಣಂತಿಯರ ಸಾವಿನ ವಿಚಾರವನ್ನು ಪ್ರಸ್ತಾಪಿಸಿರುವ ಕುಮಾರಸ್ವಾಮಿಯವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಚ್ ಡಿ ಕುಮಾರಸ್ವಾಮಿ
Manjula VN
Updated On : 7 Dec 2024, 1:54 pm

ಬೆಂಗಳೂರು: ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ. ಸರಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲದಂತಾಗಿದೆ. ಇದೇನಾ ಮಹಿಳೆಯರ ಸಬಲೀಕರಣ ಎಂದು ಕೇಂದ್ರ ಸಚಿವ ಹೆಚ್'ಡಿ.ಕುಮಾರಸ್ವಾಮಿಯವರು ರಾಜ್ಯ ಸರ್ಕಾರಕ್ಕೆ ಶನಿವಾರ ಪ್ರಶ್ನೆ ಮಾಡಿದ್ದಾರೆ.

ಬಳ್ಳಾರಿ ಬಾಣಂತಿಯರ ಸಾವು ಹಾಗೂ ಕರ್ನಾಟಕದಲ್ಲಿ ಈ ವರ್ಷ ಒಟ್ಟಾರೆಯಾಗಿ ಸಂಭವಿಸಿರುವ ಬಾಣಂತಿಯರ ಸಾವಿನ ವಿಚಾರವನ್ನು ಪ್ರಸ್ತಾಪಿಸಿರುವ ಕುಮಾರಸ್ವಾಮಿಯವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ. ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್. ಸರ್ಕಾರಿ ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ. ಇದೇನಾ ಮಹಿಳೆಯರ ಸಬಲೀಕರಣ? ಎಂದು ಪ್ರಶ್ನಿಸಿದ್ದಾರೆ.

Advertisement

Advertisement

Also Read

ಬಳ್ಳಾರಿ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ; ನನ್ನ ತಪ್ಪಿದ್ರೆ ರಾಜೀನಾಮೆ ನೀಡಲು ಸಿದ್ಧ- ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ. ಕಳಪೆ ಗ್ಲೂಕೋಸ್, ಔಷಧಗಳಿಂದ ಗೃಹಲಕ್ಷ್ಮೀಯರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಆಸ್ಪತ್ರೆಯಲ್ಲಿ IV ದ್ರಾವಣ, ಅಂದರೆ; ರಿಂಗರ್ ಲ್ಯಾಕ್ಟೇಟ್ ದ್ರಾವಣ (Ringer lactate infusion) ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆನ್ನುವುದು ಕಳವಳಕಾರಿ. ಹಾಗಾದರೆ, ಈ ದ್ರಾವಣ ಪೂರೈಸಿದ ಕಂಪನಿ ಯಾವುದು? ಅದು ಯಾರದ್ದು?

ಅನೇಕ ದಿನಗಳಿಂದ ಕಳಪೆ ಗ್ಲೂಕೋಸ್, ಔಷಧ ಪೂರೈಕೆ ಆಗುತ್ತಿದ್ದರೂ ಸರಕಾರ ಏನು ಮಾಡುತ್ತಿತ್ತು? ಇಷ್ಟು ಸೂಕ್ಷ್ಮ ವಿಚಾರವನ್ನು ಆರೋಗ್ಯ ಸಚಿವರು ಅಲಕ್ಷ್ಯ ಮಾಡಿದ್ದೇಕೆ? ಸಚಿವರಿಗೆ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಗೊತ್ತೇ ಇರಲಿಲ್ಲವೇ?

ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಿಕ್ಕಲ್ಲ. ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ. ಪಲಾಯನಕ್ಕಿಂತ ಪ್ರಾಯಶ್ಚಿತ್ತ ಮುಖ್ಯ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ. ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ. ಈ ಮರಣಗಳಿಂದ ಸರಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್'ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement