ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಜೀವಂತವಾಗಿಡಲು ಕಾಂಗ್ರೆಸ್ ಎದುರು ನೋಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ತಕ್ಕ ಉತ್ತರ ನೀಡಲು ಪ್ಲ್ಯಾನ್ ಮಾಡುತ್ತಿದೆ.
ಕಾಂಗ್ರೆಸ್ ಆರೋಪಗಳಿಗೆ ತಕ್ಕ ಉತ್ತರ ನೀಡಲು ಹೈಕಮಾಂಡ್ ಭೇಟಿಗೂ ಮೊದಲು ರಾಜ್ಯ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಮತ್ತು ಕೋರ್ ಕಮಿಟಿ ಸಮಾಲೋಚನೆ ನಡೆಸಿ ಯೋಜನೆಯನ್ನು ರೂಪಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣ ಸಂಬಂಧ ವಿಜಯೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ರವಿಯನ್ನು ಸಂಪೂರ್ಣವಾಗಿ ಬೆಂಬಲಿಸಿ ಬೆಳಗಾವಿ ಪೊಲೀಸರಿಂದ ಅಗ್ನಿಪರೀಕ್ಷೆಗೆ ಒಳಗಾದರು. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದಾಗ ಅಸಮಾಧಾನಗೊಂಡಿದ್ದ ರವಿ ಕೂಡ, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಒಪ್ಪಿಕೊಳ್ಳಲು ಸಿದ್ಧ ಎಂದು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ವಿವಾದವು ವಿಜಯೇಂದ್ರ ಮತ್ತು ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳನ್ನು ಒಗ್ಗೂಡಿಸುವ ಶಕ್ತಿಯಾಗಿ ಮಾರ್ಪಟ್ಟಿದೆ. ತಟಸ್ಥ ನಿಲುವು ತಳೆದಿರುವ ನಾಯಕರು ಹೈಕಮಾಂಡ್‌ನೊಂದಿಗೆ ಸಮಾಲೋಚಿಸಿದ ನಂತರ ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯವನ್ನು ನಿವಾರಿಸಲು ಸಭೆ ನಡೆಸಲು ಯೋಜಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರವಿ ಅವರ ಘಟನೆಯಿಂದ ಆಕ್ರೋಶಗೊಂಡಿರುವ ಬೆಳಗಾವಿಯ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಪ್ರತಿತಂತ್ರವಾಗಿ ಬೆಳಗಾವಿಯಲ್ಲಿ ರ್ಯಾಲಿ ನಡೆಸಬೇಕೆಂದು ಬಯಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ)ಸಭೆ ಮತ್ತು ಡಿಸೆಂಬರ್ 27 ರಂದು ಸಾರ್ವಜನಿಕ ರ್ಯಾಲಿಯನ್ನು ನಡೆಸುತ್ತಿದೆ. 1924 ರಲ್ಲಿ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಲ ನೀಡುತ್ತಿದೆ ಹೀಗಾಗಿ ಬಿಜೆಪಿ ರ್ಯಾಲಿ ಅಗತ್ಯ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ಲಕ್ಷ್ಮಿ ಹೆಬ್ಬಾಳ್ಕರ್ ಅವರ ತವರು ನೆಲದಲ್ಲಿ ಸುರಕ್ಷಿತವಾಗಿ ಜೀವಂತವಾಗಿ ಮನೆಗೆ ಹೋಗಿದ್ದು ಅದ್ಭುತ ಎಂದು ಸಿ,ಟಿ ರವಿ ಹೇಳಿದ್ದರು. ನಮ್ಮ ಪಕ್ಷದ ಕಾರ್ಯಕರ್ತರು ನನ್ನನ್ನು ಬೆಳಗಾವಿಗೆ ಆಹ್ವಾನಿಸಿದ್ದಾರೆ ಮತ್ತು ಪಕ್ಷದ ಹೈಕಮಾಂಡ್‌ನೊಂದಿಗೆ ಸಮಾಲೋಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರವಿ ಭಾನುವಾರ ಹೇಳಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡ ರವಿಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ, ಪಕ್ಷದ ಹೈಕಮಾಂಡ್ ರವಿ ಬೆನ್ನಿಗೆ ಗಟ್ಟಿಯಾಗಿ ನಿಂತಿರುವುದನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ಶಾಸಕರೊಬ್ಬರು ತಿಳಿಸಿದ್ದಾರೆ.