ರಾಜಕೀಯ

ಮಾಂಸಾಹಾರ ಸೇವಿಸಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಭೇಟಿ: ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Manjula VN

ಬೆಂಗಳೂರು: ಮಾಂಸಾಹಾರ ಸೇವಿಸಿ ರಾತ್ರಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಭೇಟಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳು ಎಂಬುದನ್ನು ಎಲ್ಲೋ ಒಂದು ಕಡೆ ಮರೆಯುತ್ತಿದ್ದಾರೆ ಎಂಬುದು ನನ್ನ ಭಾವನೆ. ಇದು ಮೊದಲ ಬಾರಿ ಏನಲ್ಲ. ಹಲವು ಸಂದರ್ಭಗಳಲ್ಲಿ ಈ ರೀತಿ ಘಟನೆಗಳು ಪುನರಾವರ್ತನೆ ಆಗಿವೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ದೇವರ ಬಗ್ಗೆ ಎಷ್ಟು ಭಕ್ತಿ ಭಾವನೆ ಇಟ್ಟುಕೊಂಡಿದ್ದಾರೆ ಎಂಬುದು ಬೇರೆ ಮಾತು. ಆದರೆ, ರಾಜ್ಯದ ಮುಖ್ಯಮಂತ್ರಿಯಾಗಿ ಅವರ ನಡವಳಿಕೆಯನ್ನು ಸಮಾಜ, ಪ್ರತಿಯೊಬ್ಬರೂ ಗಮನಿಸುತ್ತಾರೆ. ಈ ಘಟನೆ ನಿಜವಾಗಿಯೂ ಖಂಡನೀಯ. ಅದರಲ್ಲೂ ಸುತ್ತೂರಿನ ಪವಿತ್ರ ಗದ್ದುಗೆಗೆ ಭೇಟಿ ಕೊಟ್ಟದ್ದು ನಿಜ್ಕೂ ಒಂದು ದುರಂತ ಎಂದು ಹೇಳಿದರು.

ಯಾಕೆ ಪದೇಪದೇ ಇಂತಹ ಘಟನೆ ನಡೆಯುತ್ತದೆ ಎಂದು ಸಿದ್ದರಾಮಯ್ಯ ಅವರೇ ಉತ್ತರಿಸಬೇಕು. ಒಂದು ಕಡೆ ಭಾಷಣ ಮಾಡಿದ ಮುಖ್ಯಮಂತ್ರಿಯವರು ಅಣ್ಣ ಬಸವಣ್ಣನನ್ನು ನೆನಪು ಮಾಡಿಕೊಳ್ಳುತ್ತಾರೆ. ಅಂದರೆ, ಅವರ ನಡೆಗೂ ನುಡಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಲ್ಲ ಭಕ್ತರ ಭಾವನೆಗೆ ಧಕ್ಕೆ ಬರುವಂತೆ ಮುಖ್ಯಮಂತ್ರಿಗಳು ನಡೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಸಂಬಂಧ ಸಮೀಕ್ಷೆಗಳ ಫಲಿತಾಂಶದ ಕುರಿತು ಮಾತನಾಡಿ, ಇಡೀ ದೇಶದಲ್ಲಿ ನರೇಂದ್ರ ಮೋದಿಜೀ ಅವರ ಪರವಾದ ಅಲೆ ಇದೆ. ಸಹಜವಾಗಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣವಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇಶದ ಜನರಿಗೆ ಮನವರಿಕೆ ಆಗಿದೆ. ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿ ಇಟ್ಟುಕೊಂಡಿದ್ದೇವೆ.

28 ಸೀಟುಗಳ ಮತ ಎಣಿಕೆ ಸಂದರ್ಭದಲ್ಲಿ ಒಂದೊಂದು ಸೀಟು ಗೆಲ್ಲಲು ಕೂಡ ಕಾಂಗ್ರೆಸ್‍ನವರು ಪರಿತಪಿಸುತ್ತಾರೆ. ಅಂತಹ ವಾತಾವರಣ ಈಗಾಗಲೇ ನಿರ್ಮಾಣವಾಗಿದೆ. ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ಮೋದಿ ಮತ್ತೊಮ್ಮೆ ಎಂಬ ವಿಷಯದಲ್ಲಿ ಮತದಾರರೂ ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.

SCROLL FOR NEXT