ಸಿಎಂ ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಸವಾಲು!

ಬಿಜೆಪಿ ಆಡಳಿತಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸವಾಲು...

ಬೆಂಗಳೂರು: ಬಿಜೆಪಿ ಆಡಳಿತಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ  ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ ಎಂದು ಹೇಳಿದ್ದಾರೆ.

ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ, ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನಾನು ಹಾಕುತ್ತಿರುವ ಸವಾಲು ಎಂದು ತಿಳಿಸಿದ್ದಾರೆ.

ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಪ್ರಧಾನಿ ಮೋದಿ ಅವರು, ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು, ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ ಎಂದಿದ್ದಾರೆ.

ಪ್ರಧಾನಿ ಮೋದಿ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ. ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ. ದಿವಂಗತ ಪ್ರಧಾನಿ ಇಂದಿರಾಗಾಂಧಿಯವರು "ಗರೀಬಿ ಹಟಾವೋ" ಎಂದು ಕರೆನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಮೊದಲ ಅವಧಿಯಲ್ಲಿ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ  ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರವನ್ನು ಕಾರಿಕೊಂಡಿದ್ದರು. ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಭಾರತ್ ಬ್ರಾಂಡ್‌ನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದೆ. ನಾವು ಕೆ.ಜಿ ಗೆ ರೂ.33 ರಂತೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕೆ.ಜಿ ಗೆ ರೂ.29ರಂತೆ ಮಾರಾಟ ಮಾಡುತ್ತಿದೆ. ಒಟ್ಟಿನಲ್ಲಿ ಬಿಜೆಪಿಗೆ ಕರ್ನಾಟಕದ ಬಡವರು, ರೈತರು, ಮಹಿಳೆಯರು, ಕಾರ್ಮಿಕರೆಂದರೆ ಅಸಹನೆ.

ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಾ ಸಾಧನೆಗಳು. ಕೇಂದ್ರ ಸರ್ಕಾರ ಬರಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಅಮಿತ್ ಶಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂತಹವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ.

ಬಡವರ ಕಷ್ಟ ಕಡಿಮೆ ಮಾಡುವ, ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವ ಭಕ್ತಿ ಎಂದು ತಿಳಿದುಕೊಂಡವನು ನಾನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಬಡವರಿಗೆ ಅನ್ನವನ್ನೂ ನೀಡದೆ ದೇವರಿಗೆ ನೈವೇಧ್ಯ ನೀಡಿ ಏನು ಫಲ? ಬಡವರಿಗೆ ಮನೆ ಕಟ್ಟಿಕೊಡದೆ ದೇವರಿಗೆ ಗುಡಿ ಕಟ್ಟಿ ಏನು ಫಲ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರಿಗೆ ಯಾವ ರಾಮನ ದಯೆಯೂ ಇರಲಾರದು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT