ರಾಜಕೀಯ

ಸೋಲಿನ ಭೀತಿಯಲ್ಲಿ ಕಾಂಗ್ರೆಸ್ ನಾಯಕರು ಹೆಚ್ಚುವರಿ ಡಿಸಿಎಂ ಹುದ್ದೆ ಕುರಿತು ಮಾತನಾಡುತ್ತಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

Manjula VN

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿ ಕಾಂಗ್ರೆಸ್'ಗೆ ಶುರುವಾಗಿದ್ದು, ಹೀಗಾಗಿಯೇ ಅಲ್ಲಿನ ನಾಯಕರು ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಕುರಿತು ಮಾತನಾಡುತ್ತಿದ್ದಾರೆಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸೋಲಿನ ಭೀತಿ ಈಗಾಗಲೇ ಕಾಂಗ್ರೆಸ್ ನ್ನು ಕಾಡುತ್ತಿದ್ದು, ಹೀಗಾಗಿಯೇ ಪ್ರಿಯಾಂಕ್ ಖರ್ಗೆ ಸೇರಿ ಇತರೆ ನಾಯಕರು ಮೂರು ಡಿಸಿಎಂ ಹುದ್ದೆ ಬಗ್ಗೆ ಹಾಗೂ ಸಚಿವ ಪರಮೇಶ್ವರ್ ಅವರು ದಲಿತ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆಂದು ವ್ಯಂಗ್ಯವಾಡಿದರು.

ನಮ್ಮ ಕೆಲವು ಆಂತರಿಕ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ 3-4 ಸ್ಥಾನಗಳನ್ನು ಗೆಲ್ಲಬಹುದು ಎಂದು ತಿಳಿದುಬಂದಿದೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರ್ಕಾರದ ಸ್ಥಿರತೆಯ ಭೀತಿ ಈಗಾಗಲೇ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದ್ದು, ಈ ಸಮೀಕ್ಷಾ ವರದಿಗಳು ಭೀತಿಯನ್ನು ಹುಟ್ಟಿಸಿವೆ ಎಂದು ಹೇಳಿದರು.

ಕರಸೇವಕರ ಮೇಲಿನ ಹಳೆ ಕೇಸ್‌ಗಳನ್ನು ಮತ್ತೆ ತೆರೆಯುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಗುರಿಯಾಗಿಸುತ್ತಿದೆ. ಆದರೆ ಇಂತಹ ಒತ್ತಡ, ತಂತ್ರಗಳಿಗೆ ಬಿಜೆಪಿ ಮಣಿಯುವುದಿಲ್ಲ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿಯೂ ನಮ್ಮ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಲಾಯಿತು. ಆಗಲೂ ಪರಿಸ್ಥಿತಿಯನ್ನು ನಿರ್ಭಯವಾಗಿ ಪರಿಸ್ಥಿತಿಯನ್ನು ಎದುರಿಸಿದ್ದರು ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಶೋಕ, ಹಿರಿಯ ಕಾಂಗ್ರೆಸ್ ನಾಯಕರಾಗಿರುವ ಹರಿಪ್ರಸಾದ್ ಅವರಿಗೆ ಸಾಮಾನ್ಯ ಜ್ಞಾನವಿಲ್ಲ. ರಾಮಮಂದಿರ ಉದ್ಘಾಟನೆ ವೇಳೆ ಗೋಧ್ರಾ ರೀತಿಯ ಘಟನೆ ಸಂಭವಿಸಬಹುದು ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಅವರ ಬಳಿ ದಾಖಲೆಗಳಿದ್ದರೆ ಪೊಲೀಸರ ಮುಂದೆ ಹಾಜರುಪಡಿಸಲಿ. ಇಲ್ಲದಿದ್ದರೆ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಹೇಳಿದರು.

ರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬೆಂಬಲ ನೀಡುವುದಿಲ್ಲ ಎಂಬುದು ಗೊತ್ತಿರುವ ವಿಚಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮಮಂದಿರಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಅವರ ಪುತ್ರ ಯತೀಂದ್ರ ಹಾಗೂ ಹರಿಪ್ರಸಾದ್ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆಂದು ಕಿಡಿಕಾರಿದರು.

SCROLL FOR NEXT