ಬಿಜೆಪಿ ನಾಯಕ ವಿ ಸೋಮಣ್ಣ 
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ವಿ ಸೋಮಣ್ಣ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿ!

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದ ಮಾಜಿ ಸಚಿವ, ಬಿಜೆಪಿ ನಾಯಕ ವಿ ಸೋಮಣ್ಣ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದ ಮಾಜಿ ಸಚಿವ, ಬಿಜೆಪಿ ನಾಯಕ ವಿ ಸೋಮಣ್ಣ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ.

ರಾಜ್ಯ ಬಿಜೆಪಿಯ ಕೆಲವು ನಾಯಕರ ನಡೆಯಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ತಮ್ಮನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡುವಂತೆ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದರು.

ಜನವರಿ 8ರಂದು (ಸೋಮವಾರ) ದೆಹಲಿಗೆ ತೆರಳಿದ್ದ ಸೋಮಣ್ಣ ಅವರು ವರಿಷ್ಠರ ಭೇಟಿಗೆ ನಿರಂತರ ಪ್ರಯತ್ನ ನಡೆಸಿದ್ದರು. ಶುಕ್ರವಾರ ತಡರಾತ್ರಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕೆಲವು ಮುಖಂಡರು ದ್ವೇಷದ ರಾಜಕಾರಣ ಮಾಡಿ ತಮ್ಮನ್ನು ಸೋಲಿಸಿದರು ಎಂದು ವರಿಷ್ಠರ ಗಮನಕ್ಕೆ ತಂದರು.

‘ಕರ್ನಾಟಕದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ನಾಲ್ವರು ಸದಸ್ಯರು ಮಾರ್ಚ್‌ನಲ್ಲಿ ನಿವೃತ್ತರಾಗಲಿದ್ದಾರೆ. ವಿಧಾನಸಭೆಯ ಬಲಾಬಲದ ಆಧಾರದಲ್ಲಿ ಬಿಜೆ‍ಪಿ ಒಂದು ಸ್ಥಾನ ಗೆಲ್ಲಲಿದೆ. ನನ್ನನ್ನು ಬಿಜೆಪಿಯ ಅಭ್ಯರ್ಥಿಯನ್ನಾಗಿ ಮಾಡಬೇಕು. ಬಳಿಕ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಷ್ಟದ ಮೂರು ಕ್ಷೇತ್ರಗಳ ಹೊಣೆಯನ್ನು ನನಗೆ ನೀಡಿ. ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ನನ್ನದು’ ಎಂದು ತಿಳಿಸಿದ್ದರು.

ಈ ವೇಳೆ ಸೋಮಣ್ಣ ಅವರನ್ನು ಸಮಾಧಾನ ಪಡಿಸಲು ಅಮಿತ್ ಶಾ ಅವರು ಯತ್ನಿಸಿದ್ದು, ಹೈಕಮಾಂಡ್‌ ಸೂಚನೆಯ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ನೀವು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದೀರಿ. ನಿಮ್ಮ ಸೋಲಿಗೆ ಯಾರು ಕಾರಣ ಎಂಬ ಕುರಿತು ನಮ್ಮಲ್ಲಿ ಮಾಹಿತಿ ಇದೆ. ನಿಮ್ಮ ನೋವು ನಮಗೆ ಅರ್ಥವಾಗಿದೆ. ಅದನ್ನೆಲ್ಲ ಸದ್ಯಕ್ಕೆ ಮರೆತುಬಿಡಿ. ಮುಂದಿನ ದಿನಗಳಲ್ಲಿ ನಿಮಗೆ ಸೂಕ್ತ ಸ್ಥಾನಮಾನ ಸಿಗಲಿದೆ. ನಿಮ್ಮ ಸೇವೆಯನ್ನು ಪಕ್ಷ 10–15 ವರ್ಷಗಳ ಕಾಲ ಬಳಸಿಕೊಳ್ಳಲಿದೆ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮನವೊಲಿಸಿದ್ದಾರೆಂದು ತಿಳಿದುಬಂದಿದೆ.

ಪಕ್ಷದ ಆಂತರಿಕ ಸಮೀಕ್ಷೆ ಸೋಮಣ್ಣ ಅವರ ಗೆಲುವಿಗೆ ಅನುಕೂಲಕರ ವಾತಾವರಣ ಇಲ್ಲ ಎಂದು ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಅಮಿತ್ ಶಾ, ಚುನಾವಣೆಯಲ್ಲಿ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಮಣ್ಣ, ಯಡಿಯೂರಪ್ಪ ಮತ್ತು ವಿಜಯೇಂದ್ರ ನಡುವೆ ವೈಮನಸ್ಸು ಇರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ’ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಹೈಕಮಾಂಡ್ ನಾಯಕರ ಪ್ರತಿಕ್ರಿಯೆಯಿಂದ ನಾನು ತೃಪ್ತನಾಗಿದ್ದೇನೆ. ಪಕ್ಷದ ನಿರ್ಧಾರವನ್ನು ಕಾದು ನೋಡುತ್ತೇನೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ನಾನು ಹೇಳಿಲ್ಲ. ಆದರೆ ರಾಜ್ಯಸಭಾ ಸದಸ್ಯತ್ವಕ್ಕೆ ಮನವಿ ಮಾಡಿದ್ದೇನೆ, ಈ ಕುರಿತ ನಿರ್ಧಾರ ಹೈಕಮಾಂಡ್'ಗೆ ಬಿಟ್ಟದ್ದು ಎಂದು ಸೋಮಣ್ಣ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT