ಬಿಕೆ ಹರಿಪ್ರಸಾದ್ 
ರಾಜಕೀಯ

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ.

ಬೆಂಗಳೂರು: ಇಂದಿರಾಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆರ್‌ಎಸ್‌ಎಸ್ ಕೂಡ ಬೆಂಬಲಿಸಿತ್ತು ಎಂದು ಕಾಂಗ್ರೆಸ್‌ನ ಎಂಎಲ್‌ಸಿ ಬಿಕೆ ಹರಿಪ್ರಸಾದ್‌ ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಪ್ರಧಾನಿಯಂತಹ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗೆ ಇದು ಶೋಭೆ ತರುವುದಿಲ್ಲ. ತುರ್ತು ಪರಿಸ್ಥಿತಿಯ ಕುರಿತು ಅವರು ನೀಡಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ ಮತ್ತು ಸತ್ಯಕ್ಕೆ ದೂರವಾಗಿವೆ ಎಂದು ಹೇಳಿದರು.

ನೂತನ ಸರಕಾರ ರಚನೆ ವೇಳೆ ರಾಷ್ಟ್ರಪತಿಯವರು ಸಂಸತ್‍ನ ಜಂಟಿ ಅಧಿವೇಶನದಲ್ಲಿ ತಮ್ಮ ಭವಿಷ್ಯದ ಯೋಜನೆಗಳನ್ನು ಪ್ರಸ್ತಾಪಿಸಿ ವಿವರಣೆ ನೀಡುವುದು ಸಾಮಾನ್ಯ. ಆದರೆ, ಈ ಬಾರಿ ನರೇಂದ್ರ ಮೋದಿಯವರ ಸರಕಾರ ರಾಷ್ಟ್ರಪತಿಯವರಿಂದ ಮಾಡಿಸಿರುವ ಭಾಷಣದಲ್ಲಿ ತುರ್ತು ಪರಿಸ್ಥಿತಿಯನ್ನು ಪ್ರಸ್ತಾಪ ಮಾಡಿರುವುದು ಖಂಡನೀಯ.

ದೇಶದ ಒಳಗೆ ಮತ್ತು ಹೊರಗೆ ರಾಷ್ಟ್ರವಿರೋಧಿ ಶಕ್ತಿಗಳು ವಿಜೃಂಭಿಸಿದಾಗ ಸುರಕ್ಷತಾ ದೃಷ್ಟಿಯಿಂದ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಲು ಸಂವಿಧಾನದಲ್ಲಿ ಅವಕಾಶವಿದೆ. ಹೀಗಾಗಿ ಇಂದಿರಾಗಾಂಧಿಯವರು ಜಾರಿಗೊಳಿಸಿದ ತುರ್ತುಪರಿಸ್ಥಿತಿ ಸಂವಿಧಾನಬಾಹಿರವಲ್ಲ. ತುರ್ತುಪರಿಸ್ಥಿತಿಯನ್ನು ಹೇರುವುದು ಸಂವಿಧಾನವೇ ಕೊಟ್ಟ ನಿಬಂಧನೆ ಅಥವಾ ಅವಕಾಶ ಎಂದು ಸಮರ್ಥಿಸಿಕೊಂಡರು.

ಬಿಜೆಪಿಯ ಮಾತೃಸಂಸ್ಥೆ ಆರ್‌ಎಸ್‌ಎಸ್‌ನ ನಾಯಕರು ತುರ್ತು ಪರಿಸ್ಥಿತಿಗೆ ಬೆಂಬಲ ಘೋಷಿಸಿದ್ದರು. ಆದರೆ, ಬಿಜೆಪಿ ಆರೆಸ್ಸೆಸ್ ವಿರುದ್ಧ (ತುರ್ತು ಪರಿಸ್ಥಿತಿಯನ್ನು ಖಂಡಿಸುವ ಮೂಲಕ) ಹೋಗುತ್ತಿದೆ. ತುರ್ತು ಪರಿಸ್ಥಿತಿಯ ನಂತರ 1980, 1984, 1991, 2004 ಮತ್ತು 2009 ರ ಚುನಾವಣೆಗಳಲ್ಲಿ ದೇಶದ ಜನರು ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದ್ದಾರೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ ಸಮಾಜಘಾತುಕ ಶಕ್ತಿಗಳು, ಕಳ್ಳ ಸಾಗಣಿಕೆದಾರರು, ರಾಷ್ಟ್ರದ ಸಂವಿಧಾನವನ್ನು ಬುಡಮೇಲು ಮಾಡಲು ಯತ್ನಿಸಿದವರನ್ನು ಜೈಲಿಗೆ ಹಾಕಲಾಗಿತ್ತು. ಆದರೆ, ಈಗಿನ ಕೇಂದ್ರ ಸರಕಾರ ವಿವಿಧ ರಾಜ್ಯದ ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಿದೆ. ವಿಪಕ್ಷ ನಾಯಕರ ಮೇಲೆ ಹಗೆತನ ಸಾಧಿಸುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ ವಿರೋಧಪಕ್ಷದ ನಾಯಕರಾಗಿದ್ದ ವಾಜಪೇಯಿ ಅವರನ್ನು ಗೃಹಬಂಧನದಲ್ಲಿಡಲಾಗಿತ್ತು. ಈಗ ಕೇಂದ್ರ ಸರಕಾರ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರ ಕಣ್ಣೆದುರಿಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ವಿರೋಧಿ ಶಕ್ತಿಗಳನ್ನು ಹತ್ತಿಕ್ಕಲು ತುರ್ತು ಪರಿಸ್ಥಿತಿ ಹೇರಿದ್ದರಲ್ಲಿ ತಪ್ಪಿಲ್ಲ. ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಇಂದಿರಾಗಾಂಧಿ ವಿರುದ್ಧ ತೀರ್ಪು ನೀಡುತ್ತದೆ. ತೀರ್ಪು ನೀಡಿದ ನ್ಯಾಯಾಧೀಶರು ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು 7 ವಾರಗಳ ಕಾಲಾವಕಾಶ ನೀಡಿದರು. ಸುಪ್ರೀಂಕೋರ್ಟ್ ಕೂಡ ಇಂದಿರಾ ಗಾಂಧಿಯವರನ್ನು ಪ್ರಧಾನಿ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುತ್ತದೆ ಎಂದು ತಿಳಿಸಿದರು.

ಜಯಪ್ರಕಾಶ್ ನಾರಾಯಣ್ ಅವರು ಇಂದಿರಾಗಾಂಧಿಯವರ ವಿರುದ್ಧ ಪ್ರಜಾಸತ್ತಾತ್ಮಕ ಹೋರಾಟ ನಡೆಸುವ ಬದಲಾಗಿ ಸೇನೆ ಹಾಗೂ ಇತರ ಸಶಸ್ತ್ರ ಪಡೆಗಳಿಗೆ ದಂಗೆ ಏಳಲು ಕರೆ ನೀಡುತ್ತಾರೆ. ಹೀಗಾಗಿ ಅನಿವಾರ್ಯವಾಗಿ ತುರ್ತು ಪರಿಸ್ಥಿತಿ ಹೇರಬೇಕಾಗುತ್ತದೆ. ಕೊನೆಗೆ ಅದನ್ನು ಹಿಂದೆ ಪಡೆದಿದ್ದೂ ಕೂಡ ಇಂದಿರಾ ಗಾಂಧಿಯವರೇ ಎಂದು ವಿವರಿಸಿದರು.

ಇತ್ತೀಚೆಗೆ ಸಂಸತ್‍ನಲ್ಲಿ ರಾಹುಲ್‍ಗಾಂಧಿ ಮಾಡಿದ ಭಾಷಣವನ್ನು ಉಲ್ಲೇಖಿಸಿ ಮೋದಿಯವರು ಅವಹೇಳನ ಮಾಡಿದ್ದಾರೆ. ರಾಹುಲ್ ಅವರನ್ನು ಬಾಲಬುದ್ಧಿ, ಬಚ್ಚಾ ಎಂದಿದ್ದಾರೆ. ಈ ಮೂಲಕ ಮಕ್ಕಳನ್ನು ಅವಹೇಳನ ಮಾಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT