ಬೆಂಗಳೂರು: ಕರ್ನಾಟ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ(ಕೆಎಂವಿಎಸ್‌ಟಿಡಿಸಿ)ದ ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಪತ್ರ ಬರೆದಿದ್ದಾರೆ.
"ಕಾಂಗ್ರೆಸ್ ಅಧಿಕಾರದಲ್ಲಿ ಭ್ರಷ್ಟಾಚಾರ ನಡೆಸಲು ಸಹಕಾರ ಕೊಡುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತದೆ. ಇದರಿಂದ ಅನೇಕ ದಕ್ಷ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಟೋಬರ್ 2019ರಲ್ಲಿ ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ಬೆಂಗಳೂರು ವಿವಿ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 2016ರಲ್ಲಿ ಕೆ.ಜೆ. ಜಾರ್ಜ್ ಹೆಸರು ಹೇಳಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ಮೇ ತಿಂಗಳಲ್ಲಿ ಕೆಆರ್ಐಡಿಎಲ್ ಗುತ್ತಿಗೆದಾರ ಪಿ.ಎಸ್. ಗೌಡರ್ ಅಧಿಕಾರಿಗಳನ್ನು ದೂರಿ ದಾವಣಗೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡುವಂತೆ ಒತ್ತಡ ಹೇರಿದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ" ಎಂದು ಯತ್ನಾಳ್ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
"ವಾಲ್ಮೀಕಿ ಅಭಿವೃದ್ಧಿ ನಿಗಮದ 88.62 ಕೋಟಿ ನಗದು ವರ್ಗಾವಣೆ ವಹಿವಾಟನ್ನು ಅಕ್ರಮ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಘೋಷಿಸಿದೆ. ಈ ಸಂಬಂಧ ಬ್ಯಾಂಕ್ ಸಿಬಿಐಗೆ ದೂರು ನೀಡಿದೆ. ಜೊತೆಗೆ ಬ್ಯಾಂಕ್ ತನ್ನ ಮೂರು ಅಧಿಕಾರಿಗಳನ್ನು ಅಮಾನತು ಮಾಡಿದೆ. ಪ್ರಕರಣದ ಗಭೀರತೆಯನ್ನು ಪರಿಗಣಿಸಿ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸುವ ಅಗತ್ಯ ಇದೆ. ಬ್ಯಾಂಕ್ ನೀಡಿದ ದೂರಿನ ಆಧಾರದ ಮೇಲೆ ಸಿಬಿಐ ಮಧ್ಯ ಪ್ರವೇಶಿಸಿ ತನಿಖೆ ನಡೆಸಬೇಕು" ಎಂದು ಯತ್ನಾಳ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.