ರಾಜ್ಯಪಾಲರಿಗೆ ಬಿಜೆಪಿ ನಿಯೋಗದ ದೂರು 
ರಾಜಕೀಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವರ ಜೊತೆಗೆ ಸಿಎಂ ಸಹ ರಾಜೀನಾಮೆ ನೀಡಲಿ- ಆರ್‌.ಅಶೋಕ್ ಒತ್ತಾಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ಬಿ.ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ್, ಸಚಿವ ಬಿ.ನಾಗೇಂದ್ರ ಅವರು ಈ ಪ್ರಕರಣದಲ್ಲಿ ಸಣ್ಣ ಆರೋಪಿ. ಇದಕ್ಕೂ ದೊಡ್ಡ ಆರೋಪಿಗಳು ಇದರ ಹಿಂದೆ ಇದ್ದಾರೆ. ಈ ಎಲ್ಲ ಸತ್ಯ ಹೊರಬರಲು ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು. ಅಕ್ರಮದ ಹಣವನ್ನು ಸಚಿವರೊಬ್ಬರೇ ನುಂಗಿಲ್ಲ. ಇದರಲ್ಲಿ ಇಡೀ ಸಚಿವ ಸಂಪುಟ ಶಾಮೀಲಾಗಿದ್ದು, ಹಣ ಹೈದರಾಬಾದ್‌ಗೆ ಹೋಗಿ ನಂತರ ದೆಹಲಿಗೆ ತಲುಪಿದೆ. ನನ್ನ ಬುಡಕ್ಕೆ ಬಂದುಬಿಡುತ್ತದೆ ಎಂಬ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆ ಮಾಡಿಸಲು ಒಪ್ಪುತ್ತಿಲ್ಲ. ರಾಹುಲ್‌ ಗಾಂಧಿ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲ ಕೂಡ ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಬಡವರಿಗೆ ಸೇರಬೇಕಾಗಿದ್ದ ಹಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಬಿಗೆ ಹೋಗಿದೆ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನೂ ನುಂಗುತ್ತಾರೆ ಎನ್ನುವುದು ರಾಜ್ಯ ರಾಜಕೀಯದ ದುರಂತ. 14 ಬಾರಿ ಬಜೆಟ್‌ ಮಂಡಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಈಗ ಅವರ ಕಣ್ಣಿನಡಿಯಲ್ಲೇ ಹಗರಣ ನಡೆದಿದೆ. ಒಂದು ವರ್ಷ ಕಾಂಗ್ರೆಸ್‌ ಸರ್ಕಾರ ಲೂಟಿ ಗ್ಯಾರಂಟಿಯನ್ನು ನೀಡಿದೆ ಎಂದು ದೂರಿದರು.

ಲೂಟಿಕೋರರ ಪಾರ್ಟಿ ಕಾಂಗ್ರೆಸ್‌ ನುಡಿದಂತೆ ನಡೆಯುತ್ತೇವೆ ಎಂದು ಹಣ ಕೊಳ್ಳೆ ಹೊಡೆದಿದ್ದಾರೆ. ಯಾವುದೇ ಪ್ರಕರಣದಲ್ಲಿ ಒಂದೇ ಬಾರಿಗೆ ಎರಡು ಸಂಸ್ಥೆಯಿಂದ ತನಿಖೆ ನಡೆಸಲು ಸಾಧ್ಯವಿಲ್ಲ. ಆದರೆ ಸಿಬಿಐ ಮಾಡಬೇಕಾದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಈ ಎಟಿಎಂ ಸರ್ಕಾರ ಟಕಾಟಕ್‌ ಎಂದು ಹಣ ವರ್ಗಾವಣೆ ಮಾಡಿಕೊಂಡಿದೆ. ಇನ್ನೂ ಯಾವ ನಿಗಮಗಳಲ್ಲಿ ಎಷ್ಟು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ? ಎಷ್ಟು ಬೇನಾಮಿ ಖಾತೆಗಳಿಗೆ ಹಣ ಹೋಗಿದೆ ಎಂದು ಪತ್ತೆಯಾಗಬೇಕು. ಸಚಿವರ ಆಪ್ತ ಸಹಾಯಕ ಇದರಲ್ಲಿ ಶಾಮೀಲಾಗಿದ್ದಾನೆ ಎಂದರೆ ಸಚಿವರು ಕೂಡ ಶಾಮೀಲಾಗಿದ್ದಾರೆ ಎಂದರು.

ನಾಲ್ಕು ಹಂತದ ಹೋರಾಟ: ರಾಜ್ಯಪಾಲರಿಗೆ ಈ ಕುರಿತು ವಿವರ ನೀಡಿದ್ದೇವೆ. ಬಿಜೆಪಿ ನಾಲ್ಕು ಹಂತಗಳಲ್ಲಿ ಇದರ ವಿರುದ್ಧ ಹೋರಾಟ ಮಾಡಲಿದೆ. ಸಚಿವರು ಹಾಗೂ ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ಕೂಡ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು. ಇನ್ನೂ ಸಚಿವರ ಪರ ನಿಲ್ಲುತ್ತಾರೆ ಎಂದರೆ ಸಿಎಂ ಸಿದ್ದರಾಮಯ್ಯನವರಷ್ಟು ಭಂಡ ಯಾರೂ ಇಲ್ಲ. ಈ ಭ್ರಷ್ಟಾಚಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT