ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ 
ರಾಜಕೀಯ

ಇಂದು ರಾಜ್ಯದ 15 ರಿಂದ 18 ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ

Ramyashree GN

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಗಳನ್ನು ಬುಧವಾರ ಘೋಷಿಸುವ ಸಾಧ್ಯತೆಯಿದೆ. ರಾಜ್ಯದ 15 ರಿಂದ 18 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಸುದ್ದಿ ತಿಳಿದ ಬೆನ್ನಲ್ಲೇ ಅವರ ಬೆಂಬಲಿಗರು ಬುಧವಾರ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಪ್ರತಾಪ್ ಸಿಂಹ ಅವರ ಬೆಂಬಲಿಗರು ಕಳೆದ 10 ವರ್ಷಗಳಲ್ಲಿ ಅವರ ಕೆಲಸವನ್ನು ಎತ್ತಿ ತೋರಿಸುವ ಸಾಮಾಜಿಕ ಮಾಧ್ಯಮ ಪ್ರಚಾರಗಳನ್ನು ಸಹ ಪ್ರಾರಂಭಿಸಿದ್ದಾರೆ. ಒಕ್ಕಲಿಗ ಸಮುದಾಯದ ಹಿನ್ನೆಲೆಯ ಯುವ ನಾಯಕನಿಗೆ ಟಿಕೆಟ್ ನಿರಾಕರಿಸಿರುವುದು ಪಕ್ಷದ ಬೆಳವಣಿಗೆಗೆ ಕಡಿವಾಣ ಹಾಕಲಿದೆ ಎಂದು ಕಿಡಿಕಾರಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಂಠೇಶ್‌ಗೆ ಟಿಕೆಟ್ ನಿರಾಕರಿಸಿದರೆ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಶುಕ್ರವಾರ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಬೆಂಬಲಿಗರ ಸಭೆ ಕರೆದಿದ್ದಾರೆ.

ಹಾವೇರಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಅಥವಾ ಬೆಂಗಳೂರು ನಗರದ ಬೇರೆ ಯಾವುದಾದರೂ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಮಧ್ಯೆ, ಕೇಂದ್ರದ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ (ಉಡುಪಿ-ಚಿಕ್ಕಮಗಳೂರು) ಮತ್ತು ಭಗವಂತ ಖೂಬಾ (ಬೀದರ್) ಕೂಡ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ 'ಗೋ-ಬ್ಯಾಕ್' ಅಭಿಯಾನವನ್ನು ಎದುರಿಸುತ್ತಿದ್ದಾರೆ.

ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಪಕ್ಷದ ಹೈಕಮಾಂಡ್ ದೆಹಲಿಗೆ ಕರೆದಿದೆ. ಈ ಹಿಂದೆ ಸಿಟಿ ರವಿ ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

SCROLL FOR NEXT