ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ 
ರಾಜಕೀಯ

2024 ಲೋಕಸಭೆ ಚುನಾವಣೆ: ಕಾಂಗ್ರೆಸ್‌ಗೆ ಸೋಲುವ ಭಯ, ಅಭ್ಯರ್ಥಿಗಳೇ ಸಿಗುತ್ತಿಲ್ಲ- ಬಸವರಾಜ ಬೊಮ್ಮಾಯಿ

Ramyashree GN

ಬೆಂಗಳೂರು: ಸೋಲಿನ ಭೀತಿಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಮತ್ತು ಸರ್ಕಾರದ ಸಚಿವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ‘ಕೆಲ ಬಿಜೆಪಿ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ’ ಎಂದು ಹೇಳಿದ ನಂತರ ಬೊಮ್ಮಾಯಿ ಈ ಹೇಳಿಕೆ ನೀಡಿದ್ದಾರೆ.

'ಕಾಂಗ್ರೆಸ್ ಹದಗೆಟ್ಟ ಸ್ಥಿತಿಯಲ್ಲಿದೆ. ಅನುಭವಿ ಮತ್ತು ಹೊಸ ಮುಖಗಳಿಗೆ ಬಿಜೆಪಿ ಆದ್ಯತೆ ನೀಡುತ್ತಿದೆ. ಬಿಜೆಪಿಯಿಂದ ಮಾತ್ರ ಈ ರೀತಿಯ ನಿರ್ಧಾರ ಕೈಗೊಳ್ಳಲು ಸಾಧ್ಯ. ಕಾಂಗ್ರೆಸ್‌ನಲ್ಲಿ ಪರಿಸ್ಥಿತಿ ಹೀಗಿಲ್ಲ, ಸಚಿವರಿಗೂ ಸೋಲಿನ ಭಯ ಕಾಡುತ್ತಿದೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವುದು ಡಿಸಿಎಂ ಡಿಕೆ ಶಿವಕುಮಾರ್‌ಗೆ ಅಭ್ಯಾಸವಾಗಿದೆ. ಕಾಂಗ್ರೆಸ್‌ಗೆ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ' ಎಂದು ಹೇಳಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಈ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಿದೆ. ಯಡಿಯೂರಪ್ಪ ಅವರು ನನ್ನನ್ನು ಯಾವಾಗಲೂ ಆಶೀರ್ವದಿಸಿದ್ದಾರೆ ಮತ್ತು ನಾನು ಈಗ ಅವರ ಆಶೀರ್ವಾದವನ್ನು ಪಡೆದಿದ್ದೇನೆ. ನನ್ನ ಪರ ಪ್ರಚಾರ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

'ಈ ಬಾರಿ ಅಭ್ಯರ್ಥಿಗಳ ಆಯ್ಕೆಯನ್ನು ನವೀನ ರೀತಿಯಲ್ಲಿ ಮಾಡಲಾಗಿದೆ. ಡಾ. ಸಿಎನ್ ಮಂಜುನಾಥ್ ಅವರು ಆರೋಗ್ಯ ಕ್ಷೇತ್ರದಲ್ಲಿ ಲಕ್ಷಾಂತರ ಜನರ ಬದುಕಿಗೆ ಬದಲಾವಣೆ ತಂದಿದ್ದಾರೆ. ಒಳ್ಳೆಯ ಕೆಲಸಕ್ಕೆ ಗೌರವ ಕೊಡಲಾಗುತ್ತದೆ ಎಂಬ ಸಂದೇಶವನ್ನು ಪಕ್ಷ ನೀಡಿದೆ. ಮಹಾರಾಜ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡುವ ಮೂಲಕ ಪಕ್ಷವು ದಕ್ಷಿಣ ಕರ್ನಾಟಕದಲ್ಲಿ ಉತ್ತಮ ಸಂದೇಶವನ್ನು ರವಾನಿಸಿದೆ ಎಂದು ಬೊಮ್ಮಾಯಿ ವಿವರಿಸಿದರು.

SCROLL FOR NEXT