ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ 
ರಾಜಕೀಯ

ಜೆಡಿಎಸ್ ಜೊತೆಗಿನ ಸೀಟು ಹಂಚಿಕೆ: ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲಾಗುವುದು- ಬಿವೈ ವಿಜಯೇಂದ್ರ

Ramyashree GN

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಪಕ್ಷದ ಹೈಕಮಾಂಡ್‌ನೊಂದಿಗೆ ಸಮಾಲೋಚಿಸಿದ ನಂತರ ಜೆಡಿಎಸ್ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದೇನೆ ಮತ್ತು ಈ ವಿಷಯವನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲಾಗುವುದು ಎಂದು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಾಯಕತ್ವವು ಎಲ್ಲವನ್ನೂ ಚರ್ಚಿಸುತ್ತಿದೆ ಮತ್ತು ಸೀಟು ಹಂಚಿಕೆ ವಿಚಾರ ಸುಖಾಂತ್ಯ ಕಾಣಲಿದೆ. ಎಲ್ಲವೂ ಸರಿಹೋಗುವ ವಿಶ್ವಾಸವಿದೆ. ರಾಷ್ಟ್ರೀಯ ನಾಯಕತ್ವವು ಜೆಡಿಎಸ್‌ಗೆ ತೃಪ್ತಿಕರವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

'ನಿನ್ನೆ ರಾತ್ರಿ ನಾನು ನಮ್ಮ ರಾಷ್ಟ್ರೀಯ ನಾಯಕರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದೇನೆ. ನಂತರ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಮತ್ತು ಇಂದು ಬೆಳಿಗ್ಗೆ ಎಚ್‌ಡಿ ಕುಮಾರಸ್ವಾಮಿ ಅವರೊಂದಿಗೆ ಮಾಹಿತಿ ಹಂಚಿಕೊಂಡಿದ್ದೇನೆ' ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ತನ್ನ ಮಿತ್ರ ಪಕ್ಷವಾದ ಜೆಡಿಎಸ್‌ಗೆ ಕೇವಲ ಎರಡು ಸ್ಥಾನಗಳನ್ನು ನೀಡಲಿದೆ ಎಂಬ ವರದಿಗಳ ನಡುವೆಯೇ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಸೋಮವಾರ ಕೇಸರಿ ಪಕ್ಷದ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದರೂ ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಹಿಂದೇಟು ಹಾಕುತ್ತಿದೆ. ಎರಡು ಸೀಟು ಪಡೆಯಲು ಇಷ್ಟೆಲ್ಲಾ ಪ್ರಯತ್ನ ಮಾಡಬೇಕಾ?, ಇಷ್ಟೆಲ್ಲಾ ಹೊಂದಾಣಿಕೆ ಮಾಡಿಕೊಳ್ಳಬೇಕಾ?, ಈಗಲೂ ಹಾಸನ, ಮಂಡ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದರೆ ನಮ್ಮ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ ಎಂದಿದ್ದಾರೆ.

ಜೆಡಿಎಸ್ ಅನ್ನು ಗೌರವಯುತವಾಗಿ ನಡೆಸಿಕೊಳ್ಳುವ ಅಗತ್ಯತೆಯ ಬಗ್ಗೆ ಮತ್ತು ಕನಿಷ್ಠ 18 ಲೋಕಸಭಾ ಕ್ಷೇತ್ರಗಳಲ್ಲಿ ಅದರ ಬಲವನ್ನು ಅರ್ಥಮಾಡಿಕೊಳ್ಳುವ ಅಗತ್ಯತೆ ಬಗ್ಗೆ ಬಿಜೆಪಿ ಹೈಕಮಾಂಡ್ ಗಮನಕ್ಕೆ ತರುವಂತೆ ತಮ್ಮ ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಜೆಡಿಎಸ್ ಮೂರು ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆಯೇ ಎಂಬ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ವಿಜಯೇಂದ್ರ, ಈ ವಿಷಯ ಇನ್ನೂ ಚರ್ಚೆಯಲ್ಲಿದೆ. ನಾನು ಈಗಲೇ ಏನು ಹೇಳಲಿ?. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಎಲ್ಲವೂ ಸುಖಾಂತ್ಯ ಕಾಣಲಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಯಶಸ್ವಿಯಾಗಿ ಮುಂದುವರಿಯಲಿದೆ ಎಂದರು.

ಜೆಡಿಎಸ್ ಮಂಡ್ಯ, ಹಾಸನ ಮತ್ತು ಕೋಲಾರ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ ಮತ್ತು ಎರಡೂ ಪಕ್ಷಗಳ ನಡುವಿನ ಒಪ್ಪಂದದಂತೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಮತ್ತು ದೇವೇಗೌಡರ ಅಳಿಯ ಡಾ. ಸಿಎನ್ ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ ಟಿಕೆಟ್‌ನಲ್ಲಿ ಕಣಕ್ಕಿಳಿಸಲಾಗಿದೆ.

ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರಿಗೆ ಕಾಂಗ್ರೆಸ್ ಆಹ್ವಾನ ನೀಡಿರುವ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಎಲ್ಲವೂ ಸರಿಹೋಗುತ್ತದೆ ಮತ್ತು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಮತ್ತು ಅವರು ಬಿಜೆಪಿಯಲ್ಲಿ ಉಳಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಬಂಡಾಯದ ಬಾವುಟ ಹಾರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪಕ್ಷದ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ‘ಅವರು ಹಿರಿಯ ನಾಯಕರಾಗಿದ್ದು, ಅವರಿಗೆ ಕೆಲವು ತಪ್ಪು ಮಾಹಿತಿ ಹೋಗಿದ್ದು, ಅದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ಅವರು ಸತ್ಯವನ್ನು ಅರ್ಥಮಾಡಿಕೊಂಡ ನಂತರ ಎಲ್ಲವೂ ಚೆನ್ನಾಗಿರುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಹೇಳಿದರು.

SCROLL FOR NEXT