ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಬುಧವಾರ ರಾತ್ರಿ ಇಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ತಮ್ಮ ಪಕ್ಷ ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ಬಗ್ಗೆ ಮಾತುಕತೆ ನಡೆಸಿದರು.
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಮಧ್ಯೆ ಈ ಮಹತ್ವದ ಸಭೆ ನಡೆದಿದ್ದು, ಸಿಎಂ, ಡಿಸಿಎಂ ಮತ್ತು ಸಚಿವರು ಈ ವಿಷಯವನ್ನು ಪ್ರಸ್ತಾಪಿಸದಿರಲು ನಿರ್ಧರಿಸಿದರು. ಕರ್ನಾಟಕದಲ್ಲಿ ಎಪ್ರಿಲ್ 26 ಮತ್ತು ಮೇ 7 ರಂದು ಎರಡು ಮತ್ತು ಮೂರನೇ ಹಂತದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆದಿದೆ.
'ನಾವು ಪಕ್ಷದ ಅಭ್ಯರ್ಥಿಗಳ ಕಾರ್ಯಕ್ಷಮತೆಯ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ ಮತ್ತು 28 ಕ್ಷೇತ್ರಗಳಲ್ಲಿ 15ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವು ಉತ್ತಮ ಸಾಧನೆ ಮಾಡಲಿದೆ ಎಂದು ಭಾವಿಸುತ್ತೇವೆ' ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡ ನಂತರ, ವಿರೋಧ ಪಕ್ಷಗಳ ಮಾತಿಗೆ ಸಿಲುಕದೆ ಹೇಗೆ ಸರ್ಕಾರ ಮುಂದುವರಿಯಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆ ಮುಗಿದು ಸರ್ಕಾರಕ್ಕೆಒಂದು ವರ್ಷ ಪೂರೈಸಿದ ಬಳಿಕ ಸಿದ್ದರಾಮಯ್ಯ ಸಂಪುಟದ ಎಲ್ಲ ಸಚಿವರ ಮೊದಲನೇ ಸಭೆ ಇದಾಗಿದೆ. ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರದಿಂದ ವರ್ಷಾಚರಣೆ ನಡೆಸಲು ಸಾಧ್ಯವಾಗಿರಲಿಲ್ಲ.
ಸಚಿವರಾದ ಡಾ. ಎಂಸಿ ಸುಧಾಕರ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್, ಎಂಬಿ ಪಾಟೀಲ್ ಮತ್ತು ಕೆಜೆ ಜಾರ್ಜ್ ಅವರು ಔತಣಕೂಟದಿಂದ ಪೂರ್ವ ನಿಗದಿತ ಕಾರ್ಯಕ್ರಮಗಳಿಂದಾಗಿ ಹೊರಗುಳಿದಿದ್ದರು. ಇವರಲ್ಲಿ ಒಂದಿಬ್ಬರು ವಿದೇಶದಲ್ಲಿದ್ದಾರೆ. ಉಳಿದಂತೆ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಈಶ್ವರ್ ಖಂಡ್ರೆ, ಡಾ. ಜಿ ಪರಮೇಶ್ವರ, ಮಧು ಬಂಗಾರಪ್ಪ, ಎಚ್‌ಕೆ ಪಾಟೀಲ್, ಕೆಎಚ್ ಮುನಿಯಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಒಟ್ಟಿಗೆ ಔತಣಕೂಟವನ್ನು ಆಯೋಜಿಸುತ್ತಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಅಂತಿಮವಾಗಿ ಡಿಕೆ ಶಿವಕುಮಾರ್ ಅವರೇ ಔತಣಕೂಟ ಆಯೋಜಿಸಿದ್ದು, ಅವರ ಸಹೋದರ ಮತ್ತು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರ ಸದಾಶಿವನಗರದ ನಿವಾಸದಲ್ಲಿ ನಡೆಯಿತು.
ಶಿವಕುಮಾರ್ ಅವರೊಂದಿಗೆ ಬೆಂಗಳೂರಿನಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ, ಶಿವಕುಮಾರ್ ಅವರೇ ಆತಿಥ್ಯ ವಹಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಜೂನ್ 3 ರಂದು ಆರು ಸ್ಥಾನಗಳಿಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೂ ಮೊದಲು, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ತಲಾ ಮೂರು ಕ್ಷೇತ್ರಗಳಿಗೆ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಈ ಸಭೆ ನಿರ್ಣಾಯಕವಾಗಿತ್ತು. ರಾತ್ರಿ 11 ಗಂಟೆಯವರೆಗೂ ಔತಣಕೂಟ ನಡೆದರೂ ಮುನಿಯಪ್ಪ ಬೇಗ ಹೊರಟರು.