ಬೆಂಗಳೂರು: ಮಹಿಳಾ ಮೀಸಲಾತಿ ಕಾನೂನು ಜಾರಿಗೆ ಆಗ್ರಹಿಸಿ ಮುಂಬರುವ ಅಧಿವೇಶನದಲ್ಲಿ ಸಂಸತ್ತಿಗೆ ಮುತ್ತಿಗೆ ಹಾಕಿ, ಹೋರಾಟ ನಡೆಸುತ್ತೇವೆಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರು ಗುರುವಾರ ಹೇಳಿದರು.
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಅಲ್ಕಾ ಲಂಬಾ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಕಾಯ್ದೆ 2023 ಜಾರಿಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದ್ದು, ಹೀಗಾಗಿ ಮುಂಬರುವ ಅಧಿವೇಶನದಲ್ಲಿ ಕಾಂಗ್ರೆಸ್ ಮಹಿಳೆಯರು ಸಂಸತ್ತಿನ ಮುತ್ತಿಗೆ ಹಾಕಿ, ಹೋರಾಟ ನಡೆಸಲಿದ್ದಾರೆಂದು ಹೇಳಿದರು.
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರ ಆಶಯದಂತೆ ದೇಶಾದ್ಯಂತ ಮಹಿಳಾ ನಾಯಕಿಯರು ಬೆಳೆಯುವಂತೆ ಮಾಡಲು ನಮ್ಮ ಘಟಕ ಬದ್ಧವಾಗಿದೆ. ಸಾಮಾನ್ಯ ಮಹಿಳಾ ಸದಸ್ಯೆಯು ಎಲ್ಎಸ್ ಸದಸ್ಯೆ ಕೂಡ ಉನ್ನತ ಸ್ಥಾನಕ್ಕೆ ಏರಬೇಕು. ಒಂಬತ್ತು ತಿಂಗಳ ಹಿಂದೆ ತಾನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಿದ್ದೇನೆ. ಸೆಪ್ಟೆಂಬರ್‌ನಲ್ಲಿ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನದಿಂದ 2.5 ಲಕ್ಷ ಮಹಿಳೆಯರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. 2024 ರ ಅಂತ್ಯದ ವೇಳೆಗೆ 10 ಲಕ್ಷ ಸದಸ್ಯರನ್ನು ದಾಖಲಿಸುವ ಭರವಸೆ ಇದೆ.
50,000 ಮಹಿಳೆಯರ ದಾಖಲಾತಿಯೊಂದಿಗೆ ತೆಲಂಗಾಣ ಮೊದಲ ಸ್ಥಾನದಲ್ಲಿದ್ದು, 30,000 ಮಹಿಳೆಯರ ದಾಖಲಾತಿಯೊಂದಿಗೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಶೀಘ್ರದಲ್ಲೇ ಕರ್ನಾಟಕದಲ್ಲಿ ಬೃಹತ್ ರ್ಯಾಲಿಯನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು,
ಇದೇ ವೇಳೆ ರಾಜ್ಯದ ಮಹಿಳಾ ಕಾಂಗ್ರೆಸ್ ಸದಸ್ಯರ ಕಾರ್ಯಕ್ರಮಗಳ ಪಟ್ಟಿಯನ್ನು ಅಲ್ಕಾ ಲಂಬಾ ಅವರು ಬಿಡುಗಡೆ ಮಾಡಿದರು. ಮೂರು ದಿನಗಳ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆಂದು ಹೇಳಿದರು.
ಸರ್ಕಾರದ ನೆರವಿನೊಂದಿಗೆ ಸ್ಯಾನಿಟರಿ ಪ್ಯಾಡ್ ತಯಾರಿಕಾ ಘಟಕಗಳನ್ನು ಸ್ಥಾಪಿಸುವ ಯೋಜನೆ ಇದೆ. ಅಗತ್ಯವಿರುವ ಮಹಿಳೆಯರಿಗೆ ಸಹಾಯ ಮಾಡಲು ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಯಂತ್ರಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಮತ್ತು ತೆಲಂಗಾಣ ಸರ್ಕಾರಗಳು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕೊಟ್ಟ ಮಾತಿನಂತೆ ನಡೆಯುತ್ತಿವೆ ಎಂದು ಹೇಳಿದರು.
ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಉತ್ತರಪ್ರದೇಶದಲ್ಲಿ ರಾತ್ರಿ 12 ಗಂಟೆಗೆ ಮಹಿಳೆಯರು ಆಭರಣಗಳನ್ನು ಧರಿಸಿಕೊಂಡು ಸುರಕ್ಷಿತವಾಗಿ ಓಡಾಡಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು. ಆದರೆ, ಇವತ್ತು ಅಲ್ಲಿ ಹಾಡುಹಗಲೇ ಎನ್‍ಕೌಂಟರ್, ಹತ್ಯೆಗಳು, ಅತ್ಯಾಚಾರಗಳು ನಡೆಯುತ್ತಿವೆ ಎಂದು ಕಿಡಿಕಾರಿದರು.
ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಉತ್ತರಪ್ರದೇಶದಲ್ಲಿ ರಾತ್ರಿ 12 ಗಂಟೆಗೆ ಮಹಿಳೆಯರು ಆಭರಣಗಳನ್ನು ಧರಿಸಿಕೊಂಡು ಸುರಕ್ಷಿತವಾಗಿ ಓಡಾಡಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು. ಆದರೆ, ಇವತ್ತು ಅಲ್ಲಿ ಹಾಡುಹಗಲೇ ಎನ್‍ಕೌಂಟರ್, ಹತ್ಯೆಗಳು, ಅತ್ಯಾಚಾರಗಳು ನಡೆಯುತ್ತಿವೆ. ಆ ಅಪರಾಧಿಯ ಬಗ್ಗೆ ವಿದೇಶಗಳಲ್ಲಿರುವ ರಾಯಭಾರಿ ಕಚೇರಿಗಳಲ್ಲಿ ಚರ್ಚೆಗಳು ಆಗುತ್ತಿವೆ. ಮಹಾರಾಷ್ಟ್ರ, ಗುಜರಾತ್ ಹಾಗೂ ಉತ್ತರ ಪ್ರದೇಶದಲ್ಲಿರುವ ಬಿಜೆಪಿ ಸರಕಾರಗಳು ಆಡಳಿತ ನಿರ್ವಹಣೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿವೆ. ಬಿಜೆಪಿ ನಾಯಕರು ಅಪರಾಧಿಗಳ ಬೆಂಬಲವಾಗಿ ನಿಂತಿದ್ದಾರೆ. ಕಾಟಾಚಾರಕ್ಕೆ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದರು.