ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಸಿ ಪಿ ಯೋಗೇಶ್ವರ್ 
ರಾಜಕೀಯ

ವಾಟ್ಸಾಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ: ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ಡಿ.ಕೆ ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಬೆಂಗಳೂರು: ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೆ ಮನ್ನಣೆ ಕೊಡದ ಪಕ್ಷದ ನಾಯಕ ಸಿ. ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ನಂತರ ಯೋಗೇಶ್ವರ್ ಕೆಪಿಸಿಸಿ ಕಛೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಿಜಯೇಂದ್ರ ಅವರಿಗೆ ರಾಜೀನಾಮೆ ನೀಡಿರುವ ಸಿ.ಪಿ. ಯೋಗೇಶ್ವರ ಕಾಂಗ್ರೆಸ್ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ಡಿ.ಕೆ ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಗುರುವಾರ ಅವರು ನಾಮಪತ್ರ ಸಲ್ಲಿಕೆ ಮಾಡಲು ತಯಾರಿಯನ್ನು ಸಹ ಮಾಡಿಕೊಂಡಿದ್ದಾರೆ. ನಮ್ಮ ರಾಮನಗರ ಜಿಲ್ಲೆಯ ಪ್ರಮುಖ ಮುಖಂಡರಲ್ಲಿ ಒಬ್ಬರಾದ ಯೋಗೇಶ್ವರ್ ಅವರು ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ನಮ್ಮ ಪಕ್ಷದ ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ, ಈಗಾಗಲೇ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ. ಯೋಗೇಶ್ವರ್ ರಾಜಕಾರಣ ಆರಂಭಿಸಿದ್ದೆ ಕಾಂಗ್ರೆಸ್ ನಿಂದ, ಹೀಗಾಗಿ ಮರಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಾಳೆ ಬೆಳಗ್ಗೆ ಚನ್ನಪಟ್ಟಣ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.

ಇನ್ನೂ ಕಾಂಗ್ರೆಸ್ ಸೇರ್ಪಡೆಯಾದ ನಂತರ ಮಾತನಾಡಿದ ಮಾಜಿ ಸಚಿವ ಯೋಗೇಶ್ವರ್, ಕಳೆದ ಎರಡು ಮೂರು ತಿಂಗಳಿಂದ ನಡೆದ ರಾಜಕೀಯ ಬೆಳವಣಿಗೆಗಳು ನನಗೆ ಅಸಮಾಧಾನ ಮೂಡಿಸಿದವು, ಮೈತ್ರಿ ಆದ ನಂತರದ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕ ವಾತಾವರಣ ಇರಲಿಲ್ಲ, ಕೆಲವೊಮ್ಮೆ ನಮಗೆ ಅಂತ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ, ನಾನು ಯಾವುದೇ ಒತ್ತಡ ಹಾಗೂ ಷರತ್ತು ಇಲ್ಲದೆ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ, ಈ ಹಿಂದೆ ನಾನು ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ರಾಜಕೀಯ ಆರಂಭಿಸಿದ್ದೆ. ಈಗ ಮತ್ತೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತೇನೆ. ಇನ್ನು ಮುಂದೆ ಕ್ಷೇತ್ರದ ಅಭಿವೃದ್ಧಿಗಾಗಿ ಎಲ್ಲರ ಒಟ್ಟುಗೂಡಿ ಕೆಲಸ ಮಾಡುತ್ತೇನೆ ಎಂದರು.

ಬಿಜೆಪಿ ನಾಯಕರ ಸಲಹೆ ಮೇರೆಗೆ NDA ಟಿಕೆಟ್​ ಸಿಗಬಹುದು ಎಂದು ಯೋಗೇಶ್ವರ್​ ನಿನ್ನೆಯವರೆಗೂ ಕಾದು ಕುಳಿತ್ತಿದ್ದರು. ಸಂಜೆ ವರೆಗೂ ಕಾಯುತ್ತೇನೆ ಎಂದು ಯೋಗೇಶ್ವರ್​ ಅವರು ಪ್ರಲ್ಹಾದ್ ಜೋಶಿ, ಸಂಸದ ಡಾ.‌ ಸಿ.ಎನ್.ಮಂಜುನಾಥ್​​ ಅವರಿಗೆ ತಿಳಿಸಿ ಚನ್ನಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ಆದರೆ, ಬಿಜೆಪಿ ಟಿಕೆಟ್ ಘೋಷಣೆ ಆಗದಿರುವ ಕಾರಣ ಸಿಪಿ ಯೋಗೇಶ್ವರ್ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು. ಬಳಿಕ ಒಂದೇ ಕಾರಿನಲ್ಲಿ ಇಬ್ಬರೂ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆನಂತರ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ನಿನ್ನೆ ರಾತ್ರಿಯೇ ಸಿಎಂಗೆ ಸುಳಿವು ಸಿಕ್ಕಿತ್ತು. ಹೀಗಾಗಿ ಅವರು ವಯನಾಡಿಗೆ ಹೋಗುವುದನ್ನು ಬಿಟ್ಟು ನೇರವಾಗಿ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT