ನವದೆಹಲಿ: ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ RSS ಸಂಘದ ಗೀತೆ ಹಾಡಿದ್ದು ಇದೀಗ ಪರ-ವಿರೋಧ ಹೇಳಿಕೆಗಳಿಗೆ ಕಾರಣವಾಗುತ್ತಿದೆ. ಒಂದು ಕಡೆ ಬಿಜೆಪಿಗರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ (Congress) ಆಕ್ರೋಶ ಭುಗಿಲೆದ್ದಿದೆ. ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ (DK Shivakumar) ಕೆಪಿಸಿಸಿ ಅಧ್ಯಕ್ಷರಾಗಿ RSS ಸಂಘದ ಗೀತೆ ಹಾಡಿದ್ದು ತಪ್ಪು ಅವರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಹರಿಪ್ರಸಾದ್, ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಆರ್ಎಸ್ಎಸ್ ಅನ್ನು ಈ ದೇಶದಲ್ಲಿ ಮೂರು ಬಾರಿ ಈಗಾಗಲೇ ನಿಷೇಧ ಮಾಡಿದ್ದಾರೆ. ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಗಳಾಗಿ ಸಂಘದ ಪ್ರಾರ್ಥನೆ ಮಾಡಿದರೆ ನಮ್ಮದೇನು ಅಭ್ಯಂತರವಿಲ್ಲ ಎಂದರು. ಕಾರಣ ಸರ್ಕಾರ ಎಂಬುದು ಒಂದು ಪಕ್ಷದ್ದಲ್ಲ. ಇಡೀ ಏಳು ಕೋಟಿ ಕರ್ನಾಟಕ ಜನತೆಯ ಸರ್ಕಾರ ಎಂದು ಹೇಳಿದ್ದಾರೆ.
ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ಸಂಘಟನೆ ಅದು. ಆ ಸಂಘಟನೆಯ ಪ್ರಾರ್ಥನೆ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡಿದ್ದರೆ ಅವರು ಕ್ಷಮೆ ಕೇಳಬೇಕಾಗುತ್ತದೆ ಎಂದು ಹರಿಪ್ರಸಾದ್ ಹೇಳಿದರು.