ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಬುಧವಾರ ಹೇಳಿದರು.
ಸುದ್ದಿಗಾರರೊಂದಿಗ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವಾಗ, ಅವರನ್ನು ಬದಲಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.
ರಾಜ್ಯದ ಜನರ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ. ಮುಂದೆ ಬಜೆಟ್ ಇದೆ, ಒಳ್ಳೆಯ ಬಜೆಟ್ ಅನ್ನು ಮುಖ್ಯಮಂತ್ರಿಗಳು ನೀಡಲಿದ್ದಾರೆ. ಸರ್ಕಾರದಿಂದ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದ್ದು, ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ. ಮುಂದಿನ ತಿಂಗಳು ಉತ್ತಮ ಬಜೆಟ್ ಕೂಡ ಮಂಡಿಸಲಿದ್ದಾರೆ. ಹೀಗಾಗಿ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಕೆಲವು ಸಚಿವರು ಮತ್ತು ಶಾಸಕರು ನವದೆಹಲಿಗೆ ಹೋಗಿ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಿ ಮುಖ್ಯಮಂತ್ರಿ ಬದಲಾಯಿಸುವಂತೆ ಒತ್ತಾಯಿಸಲು ಹೋಗುತ್ತಿರುವ ಕುರಿತ ಪ್ರಶ್ನೆಗೆ, ‘ಆ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಯಾರೂ ನನ್ನೊಂದಿಗೆ ಚರ್ಚಿಸಿಲ್ಲ ಎಂದರು.