ಕೆಎನ್ ರಾಜಣ್ಣ 
ರಾಜಕೀಯ

ಎಐಸಿಸಿ, ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬೇಡಿ: ಡಿ.ಕೆ ಶಿವಕುಮಾರ್‌ಗೆ ಸಚಿವ ರಾಜಣ್ಣ ತಿರುಗೇಟು

2023ರ ಮೇನಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ನಂತರ ಇಬ್ಬರ ಮನವೊಲಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಯಿತು.

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಧಿಕಾರ ಹಂಚಿಕೆಯ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದ್ದು, ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಸೋಮವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ. ಎಐಸಿಸಿ ಮತ್ತು ಪಕ್ಷದ ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬೇಡಿ ಎಂದು ಒತ್ತಾಯಿಸಿದ್ದಾರೆ.

'ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ ಪಕ್ಷಾತೀತ ನಾಯಕ. ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಯಾರೂ ಹೇಳಿಕೆ ನೀಡುವ ಅಗತ್ಯವಿಲ್ಲ' ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ಹೆಸರು ದುರ್ಬಳಕೆ ಮಾಡಿಕೊಳ್ಳಬಾರದು ಎಂಬುದಕ್ಕೆ ನನ್ನ ಸಹಮತವಿದೆ. ಆದರೆ, ಎಐಸಿಸಿ ಹಾಗೂ ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳದಂತೆ ನಾವೂ ಅವರಿಗೆ (ಶಿವಕುಮಾರ್) ಹೇಳಬೇಕು. ಅವರು ಎಐಸಿಸಿ ಮತ್ತು ಹೈಕಮಾಂಡ್ ಅನ್ನು ಪದೇ ಪದೆ ಉಲ್ಲೇಖಿಸುತ್ತಾರೆ' ಎಂದು ತಿರುಗೇಟು ನೀಡಿದ್ದಾರೆ.

'ನಾವೆಲ್ಲರೂ ಹೈಕಮಾಂಡ್ ನಿರ್ದೇಶನವನ್ನು ಪಾಲಿಸುತ್ತೇವೆ ಮತ್ತು ಅದು ಬೇರೆ ವಿಷಯ. ರಾಜಕೀಯದಲ್ಲಿ ಜನರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ವಿಚಾರಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ' ಎಂದರು.

ಶಿವಕುಮಾರ್ ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸುತ್ತಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೌದು, ಇದು ಆರೋಪವಲ್ಲ, ಸತ್ಯ. ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 50 ವರ್ಷ ಸೇವೆ ಸಲ್ಲಿಸಿ ಹಿರಿಯ ಸದಸ್ಯರಾಗಿರುವ ನಾನು ಶಿಸ್ತಿನ ಬಗ್ಗೆ ಬೇರೆಯವರಿಂದ ಕಲಿಯಬೇಕಾಗಿಲ್ಲ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬೇಡಿ ಎಂದು ಶಿವಕುಮಾರ್ ಹೇಳಿಕೆ ನೀಡಿರುವುದು ಅವರಿಗೆ ಮತ್ತು ಇತರರಿಗೆ ಎಚ್ಚರಿಕೆಯಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಕೇವಲ ಹೇಳಿಕೆ, ಎಚ್ಚರಿಕೆಗಳು ಕೆಲಸ ಮಾಡುವುದಿಲ್ಲ. ನಾವು ತಪ್ಪು ಮಾಡಿದ್ದರೆ ಎಚ್ಚರಿಕೆ ನೀಡಬಹುದು. ಆದರೆ, ನಾವೇನು ತಪ್ಪು ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣಗೊಳಿಸಬೇಕು ಎಂಬ ಬೇಡಿಕೆಗೆ ಸಂಬಂಧಿಸಿದಂತೆ ಇತರ ಹಿರಿಯ ಸಚಿವರ ಅಭಿಪ್ರಾಯಕ್ಕೆ ನಾನು ಸಹ ಒಪ್ಪಿಗೆ ಸೂಚಿಸಿದ್ದೇನೆ ಎಂದು ರಾಜಣ್ಣ ಹೇಳಿದರು.

ನಮ್ಮ ಅಭಿಪ್ರಾಯ ಏನೇ ಇರಲಿ, ಅಂತಿಮವಾಗಿ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಸಿದ್ದರಾಮಯ್ಯ ಅವರೇ ನಮ್ಮ ಆಕಾಂಕ್ಷೆ ಏನೇ ಇರಲಿ, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಸೂಚನೆಗೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ. ಹೈಕಮಾಂಡ್‌ಗೆ ಬದ್ಧರಾಗಿರುತ್ತೇನೆ ಎಂದು ಸ್ವತಃ ಸಿಎಂ ಹೇಳಿದಾಗ ನಾವೂ ಅದನ್ನು ಪಾಲಿಸುತ್ತೇವೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದರು.

2023ರ ಮೇನಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ನಂತರ ಇಬ್ಬರ ಮನವೊಲಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಯಿತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಿತು.

ಆ ಸಮಯದಲ್ಲಿ, ಅಧಿಕಾರ ಹಂಚಿಕೆ ಸೂತ್ರದ ಆಧಾರದ ಮೇಲೆ ರಾಜಿ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿತ್ತು. ಅದರ ಪ್ರಕಾರ, ಎರಡೂವರೆ ವರ್ಷಗಳ ನಂತರ ಶಿವಕುಮಾರ್ ಸಿಎಂ ಆಗುತ್ತಾರೆ. ಆದರೆ, ಈ ವರದಿಗಳನ್ನು ಪಕ್ಷ ಅಧಿಕೃತವಾಗಿ ದೃಢಪಡಿಸಿಲ್ಲ.

ಶಿವಕುಮಾರ್ ಅವರೊಂದಿಗೆ ವೈಯಕ್ತಿಕವಾಗಿ ಯಾವುದೇ ಸಮಸ್ಯೆ ಇಲ್ಲ. ಶಿವಕುಮಾರ್ ಒಬ್ಬ ಉತ್ತಮ ಸಂಘಟಕ. ಅದಕ್ಕೆ ನಾನು ಪ್ರಶಂಸಿಸುತ್ತೇನೆ. ಅವರ ಬಗ್ಗೆ ನನಗೆ ಯಾವುದೇ ಅಸೂಯೆ ಇಲ್ಲ. ನಾನು ಮುಖ್ಯಮಂತ್ರಿಯಾಗಲು ಇಚ್ಛಿಸುತ್ತಿದ್ದೇನೆಯೇ? ಇಲ್ಲ. ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಉಂಟಾದಾಗ ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇನೆ. ಇದು ಸರ್ಕಾರದ ಅಥವಾ ಬೇರೆಯವರ ಅಭಿಪ್ರಾಯವಲ್ಲ; ಇದು ನನ್ನ ಅಭಿಪ್ರಾಯ ಎಂದು ಅವರು ಹೇಳಿದರು.

ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸುವುದರಿಂದ ಪಕ್ಷ ಮತ್ತು ಸರ್ಕಾರದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಸಕಾರಾತ್ಮಕ ಪರಿಣಾಮ ಬೀರುವ ವಿಷಯಗಳ ಬಗ್ಗೆ ಮಾತ್ರ ಮಾತನಾಡುತ್ತೇನೆ ಹೊರತು ಋಣಾತ್ಮಕ ವಿಚಾರಗಳನ್ನಲ್ಲ. ಪಕ್ಷದ 'ಒಬ್ಬ ವ್ಯಕ್ತಿ, ಒಂದು ಹುದ್ದೆ' ನೀತಿಗೆ ಅನುಗುಣವಾಗಿ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ಸ್ಥಾನಗಳನ್ನು ಅಲಂಕರಿಸಬಾರದು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT