ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ (ಸಂಗ್ರಹ ಚಿತ್ರ) 
ರಾಜಕೀಯ

JDS ಸಭೆ: ನಿಖಿಲ್‌ಗೆ ರಾಜ್ಯಾಧ್ಯಕ್ಷ ಪಟ್ಟ? ಎರಡು ತಿಂಗಳಲ್ಲಿ ಆಯ್ಕೆ ಸಾಧ್ಯತೆ..!

ಮುಂದಿನ ಏಪ್ರಿಲ್ ಒಳಗೆ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ.

ಬೆಂಗಳೂರು: ಜೆಡಿಎಸ್ ಪಕ್ಷದ ಮುಖಂಡರ ಸಭೆ ಭಾನುವಾರ ನಡೆದಿದ್ದು, ಸಭೆಯಲ್ಲಿ ನೂತನ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ಸಂಬಂಧ ಮಹತ್ವದ ಮಾತುಕತೆಗಳು ನಡದಿವೆ. ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರನ್ನು ನೇಮಕ ಮಾಡುವ ಬಗ್ಗೆ ಪಕ್ಷದ ಎಲ್ಲಾ ಪ್ರಮುಖ ಮುಖಂಡರು ಹಾಗೂ ಶಾಸಕರು, ಮಾಜಿ ಶಾಸಕರು, ಸಭೆಯಲ್ಲಿ ಒಲವು ತೋರಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿಂದು ಮಾಜಿ ಪ್ರಧಾನಿ ದೇವೇಗೌಡರ ಸಮ್ಮುಖದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್‌ನ ಎಲ್ಲ ಪ್ರಮುಖ ಮುಖಂಡರ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದ್ದು, ಬಹುತೇಕ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆ ಆಂತರಿಕ ಚುನಾವಣೆ ಮೂಲಕ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.

ಸಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ. ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನ ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಬಗ್ಗೆ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಮುಂದಿನ ಏಪ್ರಿಲ್ ಒಳಗೆ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ ಸಂಘಟನೆಯಲ್ಲಿ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.

ವಾರದಲ್ಲಿ ನಾಲ್ಕು ದಿನ ನವದೆಹಲಿಯಲ್ಲಿ ಸಚಿವಾಲಯದಲ್ಲಿ ಕೆಲಸ ಮಾಡುತ್ತೇನೆ. ಒಂದು ಅಥವಾ ಎರಡು ದಿನ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಕಾರ್ಖಾನೆಗಳಿಗೆ ಭೇಟಿ ಕೊಡುತ್ತೇನೆ. ಉಳಿದ ಸಮಯವನ್ನು ಪಕ್ಷದ ಕೆಲಸಕ್ಕೆ ಮೀಸಲಿಡುತ್ತೇನೆ. ಪಕ್ಷದ ಸಂಘಟನೆ, ಸಭೆ, ಪ್ರವಾಸ, ಮಂಡ್ಯ ಕ್ಷೇತ್ರಕ್ಕೆ ಭೇಟಿ ಇತ್ಯಾದಿಗಳ ಬಗ್ಗೆ ವೇಳಾಪಟ್ಟಿ ಸಿದ್ಧ ಮಾಡಿಕೊಂಡಿದ್ದೇನೆ. ಇನ್ನು ಮುಂದೆ ಅದರಂತೆಯೇ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಜೆಡಿಎಸ್ ತನ್ನ ಬಲವನ್ನು ಕಳೆದುಕೊಳ್ಳುತ್ತದೆ ಎಂಬ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸಚಿವರೇ... ಮೊದಲು ನಿಮ್ಮ ಪಕ್ಷದ ಕಥೆ ನೋಡಿಕೊಳ್ಳಿ. ಹೊಸದಿಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸನ್ನು ದೂರ ಇಟ್ಟು ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಇಂಡಿಯಾ ಮೈತ್ರಿಕೂಟವನ್ನು ವಿಸರ್ಜನೆ ಮಾಡಿ ಎಂದು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಾವು ಏಕಾಂಗಿಯಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸುತ್ತೇವೆ ಎಂದು ಶಿವಸೇನೆ ಹೇಳುತ್ತಿದೆ. ಅಲ್ಲೆಲ್ಲಾ ಎಲ್ಲಿದೆ ಕಾಂಗ್ರೆಸ್? ನಿಮ್ಮ ಪಕ್ಷದ ಒಳಗೆ ಏನಾಗುತ್ತಿದೆ ಎನ್ನುವುದನ್ನು ಮೊದಲು ನೋಡಿಕೊಳ್ಳಿ. ನಿಮ್ಮ ಪಕ್ಷದ ತಟ್ಟೆಯಲ್ಲಿಯೇ ಹೆಗ್ಗಣ ಸತ್ತು ಬಿದ್ದಿದೆ ಎಂದು ತಿರುಗೇಟು ಕೊಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT