ಬೆಂಗಳೂರು: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ನಿಷೇಧಿಸುವುದಾಗಿ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ.
ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಪ್ರಿಯಾಂಕ್ ಖರ್ಗೆ ಕೂಡಲೇ ತಮ್ಮ ಹೇಳಿಕೆ ಸಂಬಂಧ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು,
ಆರ್‌ಎಸ್‌ಎಸ್ ನಿಷೇಧಿಸಬೇಕು ಎಂಬ ಪ್ರಿಯಾಂಕ್ ಖರ್ಗೆಯವರ ಹೇಳಿಕೆ ಹುಚ್ಚುತನದ್ದು. ಹೇಳಿಕೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದ ಜನರ ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದರು.
ಇಡೀ ದೇಶದ ಉದ್ದಗಲಕ್ಕೆ ಆರ್‌ಎಸ್‌ಎಸ್ ಗರಡಿಯಲ್ಲಿ ಪ್ರಧಾನಿ ಮೋದಿ ಸೇರಿ ನಾವೆಲ್ಲರೂ ಬೆಳೆದವರು. ಮೊದಲನೆಯದಾಗಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಕನಸಿನ ಮಾತು. ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಮೋದಿಯವರೇ ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ. ಇಂತಹ ಹುಚ್ಚುತನದ ಹೇಳಿಕೆ ಕೊಟ್ಟು ಜನರ ಮುಂದೆ ಹಗುರ ಆಗದಿರಿ ಎಂದು ನಾನು ಪ್ರಿಯಾಂಕ್ ಖರ್ಗೆ ಅವರಿಗೆ ಸಲಹೆ ನೀಡುತ್ತೇನೆ ಎಂದು ಹೇಳಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಆರ್‌ಎಸ್‌ಎಸ್ ವಿರುದ್ಧ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ, ಭವಿಷ್ಯದಲ್ಲಿ "ಕಾಂಗ್ರೆಸ್ ಮುಕ್ತ ಭಾರತ"ವಾಗಲಿದೆ ಭವಿಷ್ಯ ನುಡಿದರು.
ಇದೇ ವೇಳೆ ರವಿಕುಮಾರ್ ಹೇಳಿಕೆ ವಿವಾದ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳ ವಿರುದ್ಧ ಪದೇ ಪದೇ ಅಗೌರವದಿಂದ ಮಾತನಾಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಯ ವಿರುದ್ಧ ಅಗೌರವದಿಂದ ಮಾತನಾಡಿದ್ದಾರೆ. ಆದರೆ, ಅವರ ವಿರುದ್ಧವೇಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಬಗ್ಗೆ ಸಿಬಿಐ ತನಿಖೆಗೆ ಹೈಕೋರ್ಟ್ ನಿರ್ದೇಶಿಸುವುದರಿಂದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ ಅವರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ವಿವಾದ ಸೃಷ್ಟಿಸಲು ಪ್ರಯತ್ನಿಸುತ್ತಿದೆ, ರವಿಕುಮಾರ್ ಯಾವ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು.