ಬೆಂಗಳೂರು: RCB ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು ಮತ್ತು 56 ಜನ ಗಾಯಗೊಂಡಿದ್ದರು.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಆರ್ ಅಶೋಕ್ ಅವರು, ಈ "ದುರಂತ" ಕರ್ನಾಟಕ ಕ್ರೀಡಾ ಇತಿಹಾಸದಲ್ಲಿ ಒಂದು "ಕಪ್ಪು ಚುಕ್ಕೆ"ಯಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವ ಮೂಲಕ ದುರಂತದ ಹಿಂದಿನ ನಿಜವಾದ ಅಪರಾಧಿಗಳನ್ನು ಗುರುತಿಸಿ, ಅಮಾಯಕ ಜೀವಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಐಪಿಎಲ್ ವಿಜಯೋತ್ಸವದ ವೇಳೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತದಲ್ಲಿ ಪ್ರಾಣ ಕಳೆದುಕೊಂಡ 11 ಅಮಾಯಕ ಯುವಕರ ಕುಟುಂಬದವರಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ.
ದುರಂತಕ್ಕೆ ಪೊಲೀಸ್ ಇಲಾಖೆಯೇ ಕಾರಣ ಎಂದು ಬಿಂಬಿಸುವ ಮೂಲಕ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದು, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಲು ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆರ್ ಅಶೋಕ್ ಒತ್ತಾಯಿಸಿದ್ದಾರೆ.
ಅಶೋಕ್ ಅವರು ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ, ಪ್ರಕರಣ ಸಂಬಂಧ ಒಬ್ಬ ಅಧಿಕಾರಿಯ ಅಮಾನತು ಕುರಿತ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮಂಡಳಿಯು ಪೊಲೀಸ್ ಅಧಿಕಾರಿಗಳನ್ನು ಮಾತ್ರ ಹೊಣೆಗಾರರನ್ನಾಗಿ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ ಎಂದು ಹೇಳಿದ್ದಾರೆ.
"ಮುಗ್ಧ ಜನರ ಜೀವಗಳನ್ನು ಬಲಿ ತೆಗೆದುಕೊಂಡ ಈ ಘಟನೆಯ ಹಿಂದಿನ ನಿಜವಾದ ಅಪರಾಧಿಗಳು ಯಾರು ಎಂಬ ಪ್ರಶ್ನೆ ಇನ್ನೂ ಉತ್ತರ ಸಿಕ್ಕಿಲ್ಲ. ರಾಜ್ಯದ ಜನರು ಸಹ ಅದೇ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ" ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ.
"ಆದ್ದರಿಂದ, ಈ ಪ್ರಕರಣವನ್ನು ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲದೆ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ಹಸ್ತಾಂತರಿಸಬೇಕೆಂದು ನಾನು ನಿಮ್ಮನ್ನು ವಿನಂತಿಸುತ್ತೇನೆ. ಇದರಿಂದಾಗಿ ಘಟನೆಯ ಹಿಂದಿನ ನಿಜವಾದ ಅಪರಾಧಿಗಳನ್ನು ಗುರುತಿಸಲಾಗುತ್ತದೆ ಮತ್ತು ಕಳೆದುಕೊಂಡ ಅಮಾಯಕ ಜೀವಗಳಿಗೆ ನ್ಯಾಯ ದೊರೆಯುತ್ತದೆ" ಎಂದು ಅವರು ತಿಳಿಸಿದ್ದಾರೆ.