ಬೆಂಗಳೂರು: ತುರ್ತು ಪರಿಸ್ಥಿತಿಯನ್ನು ಖಂಡಿಸುವ ನೆಪದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಅವಮಾನಿಸುತ್ತಿರುವುದನ್ನು ವಿರೋಧಿಸಿ ಶನಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ ತಕ್ಷಣ, ಅವರನ್ನು ಸ್ಥಳದಿಂದ ಚದುರಿಸಲಾಯಿತು ಮತ್ತು ಪೊಲೀಸ್ ವ್ಯಾನ್‌ಗಳಲ್ಲಿ ಕರೆದೊಯ್ಯಲಾಯಿತು.
ಕನಿಷ್ಠ 20 ಕಾಂಗ್ರೆಸ್ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದಿರಾ ಗಾಂಧಿಯನ್ನು ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಕರ್ನಾಟಕ ಬಿಜೆಪಿಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ದಿನಗಳಲ್ಲಿ ಈ ಪ್ರತಿಭಟನೆ ನಡೆದಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಅವರು ಜೂನ್ 25 ರಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.