ಬೆಳಗಾವಿ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಅದಕ್ಕೆ ಪೂರಕ ವಾತಾವರಣವಿದೆ ಎಂದು ಹೇಳಿದ್ದಾರೆ.
ಬಿಜೆಪಿಯ ರಾಜ್ಯ ಘಟಕದಲ್ಲಿ ಹೆಚ್ಚುತ್ತಿರುವ ಬಣ ಕಿತ್ತಾಟದ ನಡುವೆ ಪಕ್ಷದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಬಿಜೆಪಿಗೆ ಅನುಕೂಲಕರ ವಾತಾವರಣವಿದ್ದು, ಮುಂದಿನ ದಿನಗಳಲ್ಲಿ ನಾವು ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಲಹೆ ನೀಡುವ ಪ್ರಶ್ನೆಯೇ ಇಲ್ಲ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು, ಅಷ್ಟೇ ಎಂದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನೇತೃತ್ವದ ಬಣ ಪಟ್ಟು ಹಿಡಿದಿರುವುದರಿಂದ ಬಿಜೆಪಿಯಲ್ಲಿನ ಬಣ ಭಿನ್ನಾಭಿಪ್ರಾಯ ಬಹಿರಂಗವಾಗಿದೆ. ಆದರೆ, ಯತ್ನಾಳ್ ಕುರಿತ ಪ್ರಶ್ನೆಗೆ ಮಾಜಿ ಸಿಎಂ ಪ್ರತಿಕ್ರಿಯಿಸಲಿಲ್ಲ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿಯಲ್ಲಿ ಕುಂಠಿತ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಈ ಭರವಸೆಗಳಿಗೆ ಯಾವುದೇ ಅರ್ಥವಿಲ್ಲ. ಜನರನ್ನು ತೃಪ್ತಿಪಡಿಸಲು ಅವುಗಳನ್ನು ಘೋಷಿಸಲಾಗಿದೆ, ಆದರೆ ಅವುಗಳನ್ನು ಸರಿಯಾಗಿ ಜಾರಿಗೊಳಿಸಿಲ್ಲ. ಸರ್ಕಾರ ಒಂದು ರೀತಿಯಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಎಷ್ಟು ದಿನ ಹೀಗೆ ಆಡಳಿತ ನಡೆಸುತ್ತಾರೋ ನೋಡೋಣ ಎಂದರು.