ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

Nation First, Party next, Self last ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ: ಯತ್ನಾಳ್

ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು.

ಬೆಂಗಳೂರು: ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ಯತ್ನಾಳ್ ಅವರು ಗುರುವಾರ ಹೇಳಿದ್ದಾರೆ.

ಈ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ. ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ಬೇಸರ ಹೊರಹಾಕಿದ್ದಾರೆ.

ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ. ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ 'ಅಡ್ಜಸ್ಟ್ಮೆಂಟ್ ರಾಜಕಾರಣದಿಂದ' ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ 'ಪೂಜ್ಯ' ರಿಂದಲ್ಲ.

ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಶ್ರೀ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು. ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ 'ಅಪಥ್ಯ' ವಾಗಿದೆ.

ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ. Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

ಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಗೆ ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

ಕಾಬೂಲ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 'ಇತಿಹಾಸ ಪುನರಾವರ್ತನೆಯಾದರೆ, ಪಾಕ್‌ಗೆ ತುಂಬಾ ಕೆಟ್ಟದ್ದು' ಎಂದ ಮುಂಬೈ ಇಂಡಿಯನ್ಸ್ ಸ್ಪಿನ್ನರ್!

SCROLL FOR NEXT