ಡಿ ಕೆ ಶಿವಕುಮಾರ್ 
ರಾಜಕೀಯ

2 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಸಿಎಂಗಳ ಸುಪುತ್ರರನ್ನು ಸೋಲಿಸಿ ಜನ ನಮಗೆ 140 ಸ್ಥಾನ ಕೊಟ್ಟಿದ್ದಾರೆ: ಡಿ.ಕೆ ಶಿವಕುಮಾರ್

ನಮ್ಮ ಸರ್ಕಾರ ಬಡವರಿಗೆ ಆಶ್ರಯ ಅಥವಾ ಇತರೆ ಯೋಜನೆಗಳ ಮೂಲಕ ಬಡವರಿಗೆ ಮನೆ ಕಟ್ಟಿ ಕೊಟ್ಟರೆ, ನಾವು ಕೇಂದ್ರ ಸರ್ಕಾರಕ್ಕೆ ಶೇ 18 ಜಿಎಸ್ಟಿ ಪಾವತಿಸಬೇಕು.

ಹುಬ್ಬಳ್ಳಿ: ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಬೆಲೆ ಏರಿಕೆ ವಿರುದ್ಧ ಹುಬ್ಬಳ್ಳಿಯ ಗಿರಿನಿಚಾಳ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾರ್ಮಿಕರ ದಿನದಂದು ಕಾರ್ಮಿಕ ಸಚಿವರ ಜಿಲ್ಲೆಯಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ದೇಶಕ್ಕೆ ದೊಡ್ಡ ಸಂದೇಶ ರವಾನೆಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಜನರ ಆದಾಯ ಪಾತಾಳಕ್ಕೆ ಕುಸಿಯುತ್ತಿದೆ.

ಇದಕ್ಕೆ ಕೊನೆಯಾಡಲು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಆದೇಶದಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಯಿತು. ಆದರೆ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಅವರು ಆಕ್ರೋಶ ಪ್ರಾರಂಭಿಸಿದ ದಿನವೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ಮಾಡಿದೆ. ಇದರಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾಣುವಂತಾಗಿದೆ ಎಂದು ತಿಳಿಸಿದರು.

“ನಿಮ್ಮೆಲ್ಲರ ಆಶೀರ್ವಾದದಿಂದ 136 ಸ್ಥಾನಗಳೊಂದಿಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿತು ನಂತರ 2 ಪಕ್ಷೇತರ ಶಾಸಕರ ಬೆಂಬಲ ಹಾಗೂ 2 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಸುಪುತ್ರರನ್ನು ಮಣಿಸಿ ನಮಗೆ 140 ಸ್ಥಾನಗಳನ್ನು ಜನ ಕೊಟ್ಟಿದ್ದಾರೆ. ಆಮೂಲಕ ದೇಶಕ್ಕೆ ಸಂದೇಶ ರವಾನಿಸಿದ್ದಾರೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದೇ ತಿಂಗಳು 20ಕ್ಕೆ ನಿಮ್ಮ ಸರ್ಕಾರಕ್ಕೆ ಎರಡು ವರ್ಷ ಪೂರ್ಣವಾಗಲಿದೆ. ಈ ಸಂಭ್ರಮಾಚರಣೆ ಪ್ರಯುಕ್ತ ವಿಜಯನಗರದಲ್ಲಿ ದೊಡ್ಡ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಹೈಕಮಾಂಡ್ ನಾಯಕರಿಗೂ ಆಹ್ವಾನ ನೀಡಿದ್ದೇವೆ” ಎಂದರು.

“ಬಿಜೆಪಿ ಆಡಳಿತದಲ್ಲಿ ಎಲ್ಲಾ ವಸ್ತುಗಳ ದರ ಏರಿಕೆಯಾಗುತ್ತಿದೆ. ಚಿನ್ನದ ಬೆಲೆ ಏರಿಕೆಯಿಂದ ಬಡವರು ಮಾಂಗಲ್ಯ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಯುಪಿಎ ಅವಧಿಯಲ್ಲಿ 10 ಗ್ರಾಂ ಚಿನ್ನಕ್ಕೆ 28 ಸಾವಿರ ಇತ್ತು, ಈಗ ಅದು 98 ಸಾವಿರಕ್ಕೆ ತಲುಪಿದೆ. ಬೆಳ್ಳಿ ಕೆ.ಜಿಗೆ 43 ಸಾವಿರದಿಂದ 94 ಸಾವಿರಕ್ಕೆ ಏರಿದೆ. ಕಾಂಗ್ರೆಸ್ ಅವಧಿಯಲ್ಲಿ 1 ಡಾಲರ್ ಮೊತ್ತ 58 ರೂಪಾಯಿ ಇತ್ತು, ಈಗ ಅದು 84 ರೂಪಾಯಿಗೆ ಏರಿದೆ.

ಸಿಮೆಂಟ್ 268ರಿಂದ 410, ಕಬ್ಬಿಣ 39 ಸಾವಿರದಿಂದ 73 ಸಾವಿರಕ್ಕೆ ಏರಿದೆ. ಇದರಿಂದಾಗಿ ಬಡವರು ಮನೆ ಕಟ್ಟುವುದು ಅಸಾಧ್ಯವಾಗಿದೆ. ನಮ್ಮ ಸರ್ಕಾರ ಬಡವರಿಗೆ ಆಶ್ರಯ ಅಥವಾ ಇತರೆ ಯೋಜನೆಗಳ ಮೂಲಕ ಬಡವರಿಗೆ ಮನೆ ಕಟ್ಟಿ ಕೊಟ್ಟರೆ, ನಾವು ಕೇಂದ್ರ ಸರ್ಕಾರಕ್ಕೆ ಶೇ 18 ಜಿಎಸ್ಟಿ ಪಾವತಿಸಬೇಕು. ಕೇಂದ್ರ ಸರ್ಕಾರ ವಸತಿ ಯೋಜನೆಗೆ ಕೇವಲ ರೂ.1 ಲಕ್ಷ ಮಾತ್ರ ನೀಡುತ್ತದೆ. ಜಿಎಸ್ ಟಿ ಮೂಲಕ ಅದನ್ನು ವಾಪಸ್ ಕಿತ್ತುಕೊಳ್ಳುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

“ಜಿಎಸ್ಟಿ, ಬೆಲೆ ಏರಿಕೆ ಸೇರಿದಂತೆ ವಿವಿಧ ರೀತಿಯಲ್ಲಿ ಕೇಂದ್ರ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಬಿಜೆಪಿಯ ಈ ಬೆಲೆ ಏರಿಕೆಯಿಂದ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಕಂಡಿದೆ. ನಮ್ಮ ಸರ್ಕಾರ ರೈತರು, ಹಾಲು ಉತ್ಪಾದಕರಿಗೆ ನೆರವು ನೀಡಲು, ಹಾಲಿನ ಬೆಲೆಯಲ್ಲಿ 4 ರೂಪಾಯಿ ಹೆಚ್ಚಿಸಿದರೆ ಅದರ ವಿರುದ್ಧ ಬಿಜೆಪಿ ಜನಾಕ್ರೋಶ ಪ್ರತಿಭಟನೆ ಮಾಡುತ್ತಿದ್ದಾರೆ.

ಆ ಮೂಲಕ ತಮ್ಮ ರೈತ ವಿರೋಧಿ ನೀತಿ ಪ್ರದರ್ಶಿಸುತ್ತಿದ್ದಾರೆ. ಅವರ ಜನಾಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಇರಬೇಕು. ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಮಾಡಲು ಸಾಧ್ಯವಿಲ್ಲ. ಬಿಜೆಪಿ ಹಾಗೂ ದಳದ ಪ್ರತಿಭಟನೆಯಲ್ಲಿ 2 ಸಾವಿರ ಜನರೂ ಇರುತ್ತಿರಲಿಲ್ಲ. ಆದರೆ ನಮ್ಮ ಪ್ರತಿಭಟನಾ ಸಮಾವೇಶದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಸಾವಿರಾರು ಜನ ಸೇರಿದ್ದೀರಿ” ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT