ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳಯಗಳು ಸಂಪುಟ ಪುನಾರಚನೆ ಮತ್ತು ನಾಯಕತ್ವದಲ್ಲಿ ಸಂಭವನೀಯ ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಆತುರದ ನಿರ್ಧಾರವನ್ನು ತೆಗೆದುಕೊಳ್ಳದೆ ಕಾದು ನೋಡುವ ತಂತ್ರ ಅವಳಡಿಸಿಕೊಂಡಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಬಿಹಾರ ವಿಧಾನಸಭಾ ಚುನಾವಣೆ ಹಾಗೂ ಸ್ಥಳೀಯ ಚುನಾವಣೆಗಳು ಹತ್ತಿರ ಬರುತ್ತಿದ್ದು, ಈ ನಡುವೆ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಕೈ ಹಾಕಿ ಹೊಸ ಬಿಕ್ಕಟ್ಟನ್ನು ಸೃಷ್ಟಿಸುವುದನ್ನು ಕಾಂಗ್ರೆಸ್ ಹೈಕಮಾಂಡ್ ಬಯಸುತ್ತಿಲ್ಲ. ಹೀಗಾಗಿ, ಯಾವುದೇ ಬದಲಾವಣೆಗಳನ್ನು ಮಾಡುವ ಮನಸ್ಥಿತಿಯಲ್ಲಿ ಇಲ್ಲ ಎಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಕರ್ನಾಟಕ ರಾಜಕೀಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಬಿಹಾರದಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಮಂಡಿಸುತ್ತೇನೆಂಬ ಎಂಬ ಬಲವಾದ ಸಂದೇಶವನ್ನು ಡಿಕೆ.ಶಿವಕುಮಾರ್ ಪರೋಕ್ಷವಾಗಿ ಹೈಕಮಾಂಡ್'ಗೆ ರವಾನಿಸಿದ್ದಾರೆ.
ಬಿಹಾರ ಚುನಾವಣಾ ಪ್ರಚಾರದಲ್ಲಿ ಕೈಜೋಡಿಸುವ ಮೊದಲು ಭಾನುವಾರ ಸಂಜೆ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಿಹಾರದ ಜನರನ್ನು ಡಿಕೆ.ಶಿವಕುಮಾರ್ ಅವರು ಭೇಟಿ ಮಾಡಿ, ಮಾತುಕತೆ ನಡೆಸಿದರು.
ಬಿಹಾರದಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲು ಮತ್ತು ಊಹಾಪೋಹಗಳಿಗೆ ಅಂತ್ಯ ಹಾಡಲು ಅದು ಸಹಾಯ ಮಾಡುತ್ತದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ತಿಳಿಸಿದ್ದಾರೆ.
ಆದರೆ ಫಲಿತಾಂಶಗಳು ವಿರುದ್ಧವಾಗಿ ಬಂದಿದ್ದೇ ಆದರೆ, ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳು ವಿಳಂಬವಾಗಬಹುದು. ಸರ್ಕಾರ ಮೂರು ವರ್ಷಗಳನ್ನು ಪೂರೈಸುವ ಮೇ-ಜೂನ್ 2026 ರವರೆಗೆ ವಿಳಂಬವಾಗಬಹುದು ಎಂದು ಹೇಳಿದ್ದಾರೆ.
ಈ ವೇಳೆ ಹೈಕಮಾಂಡ್ ಕರ್ನಾಟಕ ಸರ್ಕಾರದ ಸ್ಥಿರತೆಯ ಮೇಲೆ ಯಾವುದೇ ಪರಿಣಾಮ ಬೀರದ ರೀತಿಯಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಬದಲಾವಣೆಗಳ ಪರಿಣಾಮಗಳ ಕುರಿತು ಹೈಕಮಾಂಡ್ ಈಗಾಗಲೇ ಕಾಂಗ್ರೆಸ್ ಶಾಸಕರಿಂದ ಪ್ರತಿಕ್ರಿಯೆ ಪಡೆಯಲು ಪ್ರಾರಂಭಿಸಿದೆ. ದೀರ್ಘಾವಧಿಯಲ್ಲಿ ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮತ್ತೊಬ್ಬ ಶಾಸಕರು ತಿಳಿಸಿದ್ದಾರೆ.
ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನಿಲ್ ಕನುಗೋಳ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರಿಗೆ ಕಾಂಗ್ರೆಸ್ ಶಾಸಕರ ಮನಸ್ಥಿತಿಯ ಕುರಿತು ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲವೊಂದು ತಿಳಿಸಿದೆ